CrimeKannada NewsKarnataka NewsLatest

*ಮಕ್ಕಳಿಲ್ಲವೆಂದು ಕಿರುಕುಳ ನೀಡುತ್ತಿದ್ದ ಪತಿಯನ್ನೇ ಚಾಕುವಿನಿಂದ ಇರಿದು ಕೊಂದ ಪತ್ನಿ*

ಪ್ರಗತಿವಾಹಿನಿ ಸುದ್ದಿ: ಬೆಳಗ್ಗೆ ಪ್ರೀತಿಯಿಂದ ಮಾತನಾಡುತ್ತಿದ್ದ ಪತಿ, ರಾತ್ರಿ ಮದ್ಯದ ಅಮಲಿನಲ್ಲಿ ಬಂದು ಜಗಳವಾಡುತ್ತಿದ್ದನೆಂಬ ಆರೋಪ. ಮಕ್ಕಳಾಗಿಲ್ಲ ಎಂಬ ವಿಚಾರ ಮುಂದಿಟ್ಟುಕೊಂಡು ನಡೆಯುತ್ತಿದ್ದ ಕಿರುಕುಳಕ್ಕೆ ಬೇಸತ್ತ ಪತ್ನಿ, ಕೊನೆಗೆ ಪತಿಯನ್ನೇ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಭೀಕರ ಘಟನೆ ನಡೆದಿದೆ.

ಬೆಂಗಳೂರಿನ ಕೆಂಪೇಗೌಡ ನಗರದ ಲಕ್ಷ್ಮೀಪುರದಲ್ಲಿ ದಂಪತಿ ನಡುವಿನ ಜಗಳ ವಿಕೋಪಕ್ಕೆ ತಿರುಗಿ ಈ ದುರಂತ ಸಂಭವಿಸಿದೆ. ರಾಜಶೇಖರ್ (44) ಕೊಲೆಯಾದ ವ್ಯಕ್ತಿ. ಅವರ ಪತ್ನಿ ಮಾಲಾಶ್ರೀ (35) ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ.

ಖಾಸಗಿ ಬ್ಯಾಂಕಿನ ಸಾಲ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ರಾಜಶೇಖರ್, ಪ್ರತಿದಿನ ರಾತ್ರಿ ಮದ್ಯ ಸೇವಿಸಿ ಮನೆಗೆ ಬಂದು ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಎನ್ನಲಾಗಿದೆ. ದಂಪತಿಗೆ ಮಕ್ಕಳಾಗಿರಲಿಲ್ಲ ಎಂಬ ವಿಚಾರವನ್ನು ಮುಂದಿಟ್ಟುಕೊಂಡು ಆಗಾಗ ಪತ್ನಿಗೆ ಕಿರುಕುಳ ನೀಡುತ್ತಿದ್ದ. ಬೆಳಗ್ಗೆ ಪ್ರೀತಿಯಿಂದ ವರ್ತಿಸುತ್ತಿದ್ದ ಪತಿ, ರಾತ್ರಿ ಕುಡಿದು ಬಂದಾಗ ಹಿಂಸಾತ್ಮಕವಾಗಿ ವರ್ತಿಸುತ್ತಿದ್ದು ಇದರಿಂದ ಹೆಂಡತಿ ಆಕ್ರೋಶಗೊಂಡಿದ್ದಳು.

ನಿನ್ನೆ ರಾತ್ರಿ ಕೂಡ ಮದ್ಯದ ಅಮಲಿನಲ್ಲಿ ಮನೆಗೆ ಬಂದ ರಾಜಶೇಖರ್, ಮಕ್ಕಳ ವಿಚಾರವಾಗಿ ಜಗಳ ಆರಂಭಿಸಿದ್ದಾನೆ. ಈ ವೇಳೆ ಜಗಳ ತೀವ್ರಗೊಂಡಿದ್ದು, ಆಕ್ರೋಶಗೊಂಡ ಮಾಲಾಶ್ರೀ ಅಡುಗೆ ಮನೆಯಲ್ಲಿದ್ದ ಚಾಕುವಿನಿಂದ ಪತಿಯ ಎದೆಗೆ ಇರಿದಿದ್ದಾಳೆ. ತೀವ್ರವಾಗಿ ಗಾಯಗೊಂಡ ರಾಜಶೇಖರ್ ರಕ್ತದ ಮಡುವಿನಲ್ಲಿ ಬಿದ್ದಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬಳಿಕ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಕೆಂಪೇಗೌಡ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಲಾಶ್ರೀಯನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ದಂಪತಿಯ ನಡುವಿನ ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯಗೊಂಡಿದ್ದು, ಪ್ರಕರಣದ ಸಂಪೂರ್ಣ ಹಿನ್ನೆಲೆಯನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

Related Articles

Back to top button