*ಕಾಡಾನೆ ದಾಳಿಗೆ ಮತ್ತೊಂದು ಬಲಿ*: *ಪ್ರತಿಭಟನೆ ನಡುವೆಯೇ ವ್ಯಕ್ತಿ ಸಾವು, ಅರಣ್ಯ ಇಲಾಖೆ ವಿರುದ್ಧ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮತ್ತೊಂದು ಜೀವ ಬಲಿ ಪಡೆದಿದೆ. ಇತ್ತೀಚೆಗಷ್ಟೇ ಮಹಿಳೆಯೊಬ್ಬರು ಕಾಡಾನೆ ದಾಳಿಗೆ ಮೃತಪಟ್ಟಿದ್ದರು. ಆ ಘಟನೆಯ ಬೆನ್ನಲ್ಲೇ ಇದೀಗ ಮತ್ತೊಬ್ಬ ವ್ಯಕ್ತಿ ಆನೆಯ ದಾಳಿಗೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ಕಾಡಾನೆ ಹಾವಳಿ ತಡೆಯಲು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಈ ಘಟನೆ ನಡೆದಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
ಕಾಫಿ ತೋಟಕ್ಕೆ ಕೆಲಸಕ್ಕೆ ತೆರಳುತ್ತಿದ್ದ ಹಫೀಜ್ (55) ಎಂಬುವವರನ್ನು ಕಾಡಾನೆ ಕಾಲಿನಿಂದ ತುಳಿದು ಸಾಯಿಸಿದೆ. ಅರೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹವನ್ನು ಬೇಲೂರು ತಾಲೂಕು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಮಹಿಳೆಯ ಸಾವಿನ ಬೆನ್ನಲ್ಲೇ ಮತ್ತೊಂದು ದುರಂತ
ಶನಿವಾರ ಬೇಲೂರು ತಾಲೂಕಿನ ಕುಶಾವರ ಗ್ರಾಮದ ಬಳಿ ಒಂಟಿ ಸಲಗದ ದಾಳಿಗೆ ದನ ಮೇಯಿಸಲು ತೆರಳಿದ್ದ ಚೌಡನಹಳ್ಳಿಯ ಜಯಮ್ಮ ಮೃತಪಟ್ಟಿದ್ದರು. ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಶವವಿಟ್ಟು ಪ್ರತಿಭಟನೆ ನಡೆಸಿ, ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿದ್ದರು.
ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಬೇಲೂರು ಭಾಗದಲ್ಲಿರುವ ಕಾಡಾನೆಗಳನ್ನು ಓಡಿಸುವುದಾಗಿ ಸಿಸಿಎಫ್ ಏಡುಕೊಂಡಲ ಭರವಸೆ ನೀಡಿದ್ದರು. ಅದರಂತೆ ಕುಮ್ಕಿ ಆನೆಗಳು ಆಗಮಿಸಬೇಕಿದ್ದು, ಸೋಮವಾರದಿಂದ ಕಾರ್ಯಾಚರಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ, ಈ ಕಾರ್ಯಾಚರಣೆ ಆರಂಭಕ್ಕೂ ಮುನ್ನವೇ ಮತ್ತೊಂದು ಜೀವ ಬಲಿಯಾಗಿದೆ.
ಹಫೀಜ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಜನರು ಬೇಲೂರು ತಾಲೂಕು ಆಸ್ಪತ್ರೆ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದರು. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಆಸ್ಪತ್ರೆಗೆ ಪ್ರವೇಶಿಸದಂತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು.
ಮೃತದೇಹವನ್ನು ಘಟನಾ ಸ್ಥಳಕ್ಕೆ ವಾಪಸ್ ತೆಗೆದುಕೊಂಡು ಹೋಗುವಂತೆ ಪ್ರತಿಭಟನಾಕಾರರು ಪಟ್ಟು ಹಿಡಿದರು. ಸರ್ಕಾರ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.




