Latest

ಸೋನಿಯಾ, ರಾಹುಲ್, ಪ್ರಿಯಾಂಕಾ ರಾಜೀನಾಮೆ ನೀಡ್ತಾರಾ ? ದಿಢೀರ್ ದೆಹಲಿಗೆ ತೆರಳಿದ ಡಿಕೆಶಿ

ಪ್ರಗತಿ ವಾಹಿನಿ ಸುದ್ದಿ ನವದೆಹಲಿ

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪಕ್ಷದ ರಾಷ್ಟ್ರೀಯ ಮುಖಂಡರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ವದಂತಿಯನ್ನು ಕಾಂಗ್ರೆಸ್ ಪಕ್ಷ ತಳ್ಳಿ ಹಾಕಿದೆ.

ಪಂಚ ರಾಜ್ಯ ಚುನಾವಣೆಯ ಸೋಲಿನ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಯನ್ನು ಖಾಸಗಿ ವಾಹಿನಿಯೊಂದು ಪ್ರಸಾರ ಮಾಡಿತ್ತು.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ, ಈ ರೀತಿಯ ವದಂತಿಯ ಆಧಾರದಲ್ಲಿ ಸುದ್ದಿ ಪ್ರಸಾರ ಮಾಡುವುದು ತಪ್ಪು. ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಅಂಥಹ ಯಾವುದೇ ಚರ್ಚೆ ಆಗಿಲ್ಲ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿಲ್ಲ, ನೀಡುವುದೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಗಾಂಧಿ ಕುಟುಂಬ ಕಾಂಗ್ರೆಸ್‌ನ ಐಕ್ಯತೆಗೆ ಆಧಾರ

ಇನ್ನು ಪಂಚ ರಾಜ್ಯ ಚುನಾವಣೆಯ ಸೋಲಿನ ಬೆನ್ನಲ್ಲೇ ಕಾಂಗ್ರೆಸ್‌ನ ಹಲವು ಮುಖಂಡರು ನಾಯಕತ್ವ ಬದಲಾವಣೆಯ ಬಗ್ಗೆ ಮಾತಾಡಿದ್ದಾರೆ. ಆದರೆ ಖಾಸಗಿ ಸುದ್ದಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ದೇಶದಲ್ಲಿ ಕಾಂಗ್ರೆಸ್ ಪಕ್ಷ ಒಗ್ಗೂಡಿ ಇರಲು ಗಾಂಧಿ ಕುಟುಂಬವೇ ಆಧಾರವಾಗಿದೆ ಎಂದಿದ್ದಾರೆ.

ಈ ಮಧ್ಯೆ, ಭಾನುವಾರ ಕಾಂಗ್ರೆಸ್ ತುರ್ತು ಸಭೆ ಕರೆದಿದ್ದು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ತಮ್ಮ ಪ್ರಸ್ತುತ ಜವಾಬ್ದಾರಿಗಳಿಂದ ಹಿಂದೆ ಸರಿದು ಹೊಸಬರಿಗೆ ಅವಕಾಶ ಮಾಡಿಕೊಡಲಿದ್ದಾರೆ ಎನ್ನುವ ಸುದ್ದಿ ಹರಡಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೈಕಮಾಂಡ್ ಸೂಚನೆ ಮೇರೆಗೆ ದಿಢೀರ್ ನವದೆಹಲಿಗೆ ತೆರಳಿದ್ದಾರೆ.

ನಾನು ರಾಜೀನಾಮೆ ಕೊಟ್ಟರೂ ಪಕ್ಷಕ್ಕೆ ಡ್ಯಾಮೇಜ್ ಆಗಲ್ಲ ಎಂದ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button