CrimeKannada NewsKarnataka NewsLatest

*ಆನೆ ದಾಳಿಗೆ ಮಹಿಳೆ ಬಲಿ*: *ಶಾಶ್ವತ ಪರಿಹಾರ ಸಿಗುವವರೆಗೂ ಅಂತ್ಯಸಂಸ್ಕಾರ ಮಾಡಲ್ಲ ಎಂದು ಗ್ರಾಮಸ್ಥರ ಪಟ್ಟು*

ಪ್ರಗತಿವಾಹಿನಿ ಸುದ್ದಿ: ಕಾಡಾನೆ ಹಾವಳಿಗೆ ಮತ್ತೊಂದು ಜೀವ ಬಲಿಯಾಗಿದೆ. ಆಡುಗಳನ್ನು ಮೇಯಿಸುತ್ತಿದ್ದ ಮಹಿಳೆಯೊಬ್ಬರು ಕಾಡಾನೆಯ ದಾಳಿಗೆ ಸಿಲುಕಿ ಮೃತಪಟ್ಟಿದ್ದಾರೆ. ಈ ಸಾವಿನಿಂದ ಆಕ್ರೋಶಗೊಂಡ ಗ್ರಾಮಸ್ಥರು ಮೃತದೇಹದ ಅಂತ್ಯಸಂಸ್ಕಾರಕ್ಕೂ ಅವಕಾಶ ನೀಡದೆ ಪ್ರತಿಭಟನೆ ಆರಂಭಿಸಿದ್ದಾರೆ. ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಸಿಗುವವರೆಗೂ ಹಿಂದೆ ಸರಿಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕುಶಾವರ ಗ್ರಾಮದ ಬಳಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಶಾಸಕ ಹೆಚ್.ಕೆ. ಸುರೇಶ್ ಮತ್ತು ಸಂಸದ ಶ್ರೇಯಸ್ ಪಟೇಲ್ ಅವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಕಾಡಾನೆಗಳನ್ನು ಸ್ಥಳಾಂತರಿಸುವ ಮೂಲಕ ಶಾಶ್ವತ ಪರಿಹಾರ ಕಲ್ಪಿಸಬೇಕು. ಅಲ್ಲಿಯವರೆಗೂ ಮೃತದೇಹವನ್ನು ಸ್ಥಳದಿಂದ ತೆರವುಗೊಳಿಸಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಪ್ರತಿಭಟನಾಕಾರರ ಮನವೊಲಿಸಲು ಬಂದ ಶಾಸಕ ಮತ್ತು ಸಂಸದರೂ ಅವರೊಂದಿಗೆ ಕುಳಿತುಕೊಂಡಿದ್ದಾರೆ.

ಪ್ರತಿಭಟನಾ ಸ್ಥಳದಿಂದಲೇ ಸಂಸದ ಶ್ರೇಯಸ್ ಪಟೇಲ್ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕರೆ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಸಿಎಂ, ರೈಲ್ವೆ ಬ್ಯಾರಿಕೇಡ್ ಅಳವಡಿಸಲು ಕೂಡಲೇ ಸೂಚನೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಒಂದು ನಿಯೋಗದೊಂದಿಗೆ ಬೆಂಗಳೂರಿಗೆ ಬರುವಂತೆ ತಿಳಿಸಿದ ಸಿಎಂ, ಸಂಬಂಧಪಟ್ಟ ಅಧಿಕಾರಿಗಳನ್ನು ಗ್ರಾಮಸ್ಥರ ಬಳಿಗೆ ಕಳುಹಿಸುವುದಾಗಿ ಹೇಳಿದ್ದಾರೆ. ಶೀಘ್ರದಲ್ಲೇ ಸಂಬಂಧಪಟ್ಟ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸುವುದಾಗಿ ತಿಳಿಸಿ, ಸ್ವಲ್ಪ ಸಮಯಾವಕಾಶ ನೀಡುವಂತೆ ಮನವಿ ಮಾಡಿದ್ದಾರೆ.

ಸಿಎಂ ಭರವಸೆ ನೀಡಿದರೂ ಗ್ರಾಮಸ್ಥರು ತಮ್ಮ ಪ್ರತಿಭಟನೆ ಮುಂದುವರಿಸಿದ್ದಾರೆ. ಕಾಡಾನೆಗಳನ್ನು ಸ್ಥಳಾಂತರಿಸುವ ಮೂಲಕ ಶಾಶ್ವತ ಪರಿಹಾರ ಕಲ್ಪಿಸಬೇಕು ಹಾಗೂ ಅರಣ್ಯ ಸಚಿವರು ಸ್ಥಳಕ್ಕೆ ಆಗಮಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸ್ಥಳದಲ್ಲಿ ಸಿಸಿಎಫ್ ಏಡುಕುಂಡಲ ಮತ್ತು ಡಿಎಫ್‌ಒ ಹರೀಶ್ ಮೊಕ್ಕಾಂ ಹೂಡಿದ್ದಾರೆ. ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಕೂಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇದೇ ವೇಳೆ ಶೇಷಾದ್ರಿ ಎಂಬಾತ ಮಹಿಳೆಯ ಮೃತದೇಹವನ್ನು ಎತ್ತಲು ಮುಂದಾಗಿದ್ದು, ಇದರಿಂದ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಬಂದಿದ್ದ ಆತನನ್ನು ಪ್ರಶ್ನಿಸಿ, ಪ್ರತಿಭಟನೆಯ ನಡುವೆ ಮೃತದೇಹ ತೆರವುಗೊಳಿಸಲು ಮುಂದಾಗಿದ್ದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಕೆಲಕಾಲ ಗಲಾಟೆ ನಡೆದಿದ್ದು, ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

Related Articles

Back to top button