Belagavi NewsBelgaum NewsHealthKannada NewsTravel

*ಕೆಎಲ್‌ಇ ಸೆಂಟಿನರಿ ಚಾರಿಟೇಬಲ್ ಆಸ್ಪತ್ರೆಯಲ್ಲಿ ವಿಶ್ವ ಅರಿವಳಿಕೆ ದಿನಾಚರಣೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶಸ್ತ್ರಚಿಕಿತ್ಸೆಯನ್ನು ಸುರಕ್ಷಿತವಾಗಿ ನಡೆಸುವಲ್ಲಿ ಅರಿವಳಿಕೆ ತಜ್ಞರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ರೋಗಿಗಳ ಸುರಕ್ಷತೆ ಹಾಗೂ ಗುಣಮಟ್ಟದ ಚಿಕಿತ್ಸೆಯನ್ನು ಖಚಿತಪಡಿಸುವಲ್ಲಿ ಅವರ ಸೇವೆ ಪ್ರಮುಖವಾಗಿದೆ ಎಂದು ಕೆಎಲ್‌ಇ ಸೆಂಟಿನರಿ ಚಾರಿಟೇಬಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಸಂಜಯ್ ಕಂಬಾರ್ ಹೇಳಿದರು.

ನಗರದ ಯಳ್ಳೂರು ರಸ್ತೆಯಲ್ಲಿರುವ ಕೆಎಲ್‌ಇ ಸೆಂಟಿನರಿ ಚಾರಿಟೇಬಲ್ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ವಿಶ್ವ ಅರಿವಳಿಕೆ ದಿನದ ಅಂಗವಾಗಿ ಅರಿವಳಿಕೆ ವಿಭಾಗದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಸ್ತ್ರಚಿಕಿತ್ಸೆಗೆ ಒಳಗಾಗುವ ರೋಗಿಗಳಿಗೆ ಸುರಕ್ಷಿತವಾಗಿ ಅರಿವಳಿಕೆ ನೀಡುವುದು, ಶಸ್ತ್ರಚಿಕಿತ್ಸೆಯ ಸಂದರ್ಭದಲ್ಲಿ ಅವರ ಆರೋಗ್ಯ ಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುವುದು ಹಾಗೂ ಶಸ್ತ್ರಚಿಕಿತ್ಸೆಯ ನಂತರ ಚೇತರಿಕೆಗೆ ಅಗತ್ಯವಾದ ವೈದ್ಯಕೀಯ ಆರೈಕೆ ಒದಗಿಸುವಲ್ಲಿ ಅರಿವಳಿಕೆ ತಜ್ಞರು ನಿರ್ಣಾಯಕ ಪಾತ್ರ ವಹಿಸುತ್ತಾರೆ ಎಂದು ತಿಳಿಸಿದರು.

ಆಧುನಿಕ ತಂತ್ರಜ್ಞಾನ, ವೈದ್ಯಕೀಯ ಪರಿಣತಿ ಮತ್ತು ಸುರಕ್ಷತಾ ಕ್ರಮಗಳ ಮೂಲಕ ರೋಗಿಗಳಿಗೆ ಉತ್ತಮ ಚಿಕಿತ್ಸಾ ಫಲಿತಾಂಶಗಳನ್ನು ಒದಗಿಸಲು ಸಾಧ್ಯವಾಗಿದೆ. ಈ ನಿಟ್ಟಿನಲ್ಲಿ ಅರಿವಳಿಕೆ ವಿಭಾಗದ ವೈದ್ಯರು, ನರ್ಸಿಂಗ್ ಸಿಬ್ಬಂದಿ ಹಾಗೂ ಇತರ ಆರೋಗ್ಯ ಕಾರ್ಯಕರ್ತರ ನಡುವಿನ ಸಮನ್ವಯ ಅತ್ಯಗತ್ಯವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅರಿವಳಿಕೆ ವಿಭಾಗದ ಮುಖ್ಯಸ್ಥ ಡಾ. ಆರ್.ಜಿ. ನೆಲವಿಗಿ ಮಾತನಾಡಿ, ಶಸ್ತ್ರಚಿಕಿತ್ಸೆಯ ಸಮಯದಲ್ಲಿ ರೋಗಿಗಳಿಗೆ ನೋವು ಮತ್ತು ಅಸ್ವಸ್ಥತೆ ಉಂಟಾಗದಂತೆ ನೋಡಿಕೊಳ್ಳುವುದರ ಜೊತೆಗೆ, ಉಸಿರಾಟ, ಹೃದಯ ಬಡಿತ ಹಾಗೂ ರಕ್ತದೊತ್ತಡದಂತಹ ಪ್ರಮುಖ ದೈಹಿಕ ಕಾರ್ಯಗಳನ್ನು ನಿರಂತರವಾಗಿ ಗಮನಿಸುವುದು ಅರಿವಳಿಕೆ ತಜ್ಞರ ಪ್ರಮುಖ ಜವಾಬ್ದಾರಿಯಾಗಿದೆ ಎಂದು ವಿವರಿಸಿದರು.

ಶಸ್ತ್ರಚಿಕಿತ್ಸೆಗಳಷ್ಟೇ ಅಲ್ಲದೆ, ತುರ್ತು ಚಿಕಿತ್ಸೆಗಳು, ತೀವ್ರ ನಿಗಾ ಘಟಕದ ಸೇವೆಗಳು ಹಾಗೂ ನೋವು ನಿರ್ವಹಣೆಯಲ್ಲಿಯೂ ಅರಿವಳಿಕೆ ಚಿಕಿತ್ಸೆ ಮಹತ್ವದ ಪಾತ್ರ ವಹಿಸುತ್ತದೆ. ವೈದ್ಯಕೀಯ ಕ್ಷೇತ್ರದಲ್ಲಿ ಅರಿವಳಿಕೆ ಚಿಕಿತ್ಸೆಯ ಪ್ರಾಮುಖ್ಯತೆಯ ಕುರಿತು ಸಾರ್ವಜನಿಕರು ಮತ್ತು ಆರೋಗ್ಯ ಸಿಬ್ಬಂದಿಯಲ್ಲಿ ಜಾಗೃತಿ ಮೂಡಿಸುವುದು ವಿಶ್ವ ಅರಿವಳಿಕೆ ದಿನಾಚರಣೆಯ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಯು.ಎಸ್.ಎಂ. ಕೆಎಲ್‌ಇ ನಿರ್ದೇಶಕ ಡಾ. ಎಚ್.ಬಿ. ರಾಜಶೇಖರ ಹಾಗೂ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ ಎನ್. ಅವರು ಅರಿವಳಿಕೆ ವಿಭಾಗದ ತಂಡದ ಕಾರ್ಯವನ್ನು ಶ್ಲಾಘಿಸಿದರು. ಶಸ್ತ್ರಚಿಕಿತ್ಸೆಯ ಸಂದರ್ಭದಲ್ಲಿ ಸುರಕ್ಷಿತ ಮತ್ತು ಪರಿಣಾಮಕಾರಿ ಚಿಕಿತ್ಸೆ ಒದಗಿಸುವಲ್ಲಿ ಅರಿವಳಿಕೆ ವೈದ್ಯರ ಕೊಡುಗೆ ಮಹತ್ವದ್ದಾಗಿದೆ ಎಂದು ಅಭಿನಂದಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಅರಿವಳಿಕೆ ವಿಭಾಗದ ವೈದ್ಯರು, ಸಿಬ್ಬಂದಿ ಹಾಗೂ ಇತರ ಆರೋಗ್ಯ ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button