*ವೃದ್ಧಾಪ್ಯವೇತನ 2000 ರೂಪಾಯಿಗೆ ಏರಿಸಲು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮನವಿ*
ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿರಿಯ ನಾಗರಿಕರ ಸ್ಮರಣೆ ಕೇವಲ ಈ ಒಂದು ದಿನಕ್ಕೆ ಸೀಮಿತವಾಗಬಾರದು. ಹಿರಿಯ ನಾಗರಿಕರ ಅನುಭವ ನಮಗೆಲ್ಲಾ ಸಂಪನ್ಮೂಲ ಆಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅಭಿಪ್ರಾಯಪಟ್ಟರು. ರವೀಂದ್ರ ಕಲಾ ಕ್ಷೇತ್ರದಲ್ಲಿ ಭಾನುವಾರ ನಡೆದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಸ್ತಾವಿಕ ಭಾಷಣ ಮಾಡಿದ ಸಚಿವರು, ಹಿರಿಯರ ಅನುಭವದ ಮಾತುಗಳು ನಮಗೆ ಮುಖ್ಯ ಎಂದರು.
ಹಿರಿಯ ನಾಗರಿಕರ ಸಬಲಿಕರಣಕ್ಕೆ ಅನೇಕ ಕಾರ್ಯಕ್ರಮಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೀಡುತ್ತಾ ಬಂದಿವೆ. ನುಡಿದಂತೆ ನಡೆಯುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಶಯದಂತೆ, ಹಿರಿಯರಿಗೆ ಇನ್ನು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಚಿವರು ಹೇಳಿದರು.
- ಮಾಸಾಶನ 2000ರೂಪಾಯಿಗೆ ಏರಿಸಲು ಮನವಿ
ಸದ್ಯ ಹಿರಿಯ ನಾಗರಿಕರಿಗೆ 1200 ರೂಪಾಯಿ ಮಾಸಾಶನ ಬರುತ್ತಿದ್ದು,ಈ ಮೊತ್ತವನ್ನು 2000 ರೂಪಾಯಿಗೆ ಏರಿಸಬೇಕು ಎಂದು ಇದೇ ವೇಳೆ ಮುಖ್ಯಮಂತ್ರಿಗಳಿಗೆ ಸಚಿವರು ಮನವಿ ಮಾಡಿದರು. ರಾಜ್ಯದಲ್ಲಿ ಸುಮಾರು 48 ಲಕ್ಷ ವೃದ್ಧರಿಗೆ ವೃದಾಪ್ಯವೇತನ ನೀಡುತ್ತಿದ್ದು, ಸುಮಾರು 58 ಲಕ್ಷ ಮಂದಿ ಹಿರಿಯ ನಾಗರಿಕರಿದ್ದಾರೆ. ವೃದ್ಧಾಪ್ಯ ವೇತನವನ್ನು 2 ಸಾವಿರ ರೂಪಾಯಿಗೆ ಏರಿಸಬೇಕು ಎಂದರು. - ನೂನ್ಯತೆಗಳಿಗೆ ಶೀಘ್ರವೇ ಪರಿಹಾರ
ರಾಜ್ಯದಲ್ಲಿರುವ ಕೆಲ ವೃದ್ಧಾಶ್ರಮಗಳಿಗೆ ಹಲವು ನೂನ್ಯತೆಗಳನ್ನು ಗಮನಿಸಿದ್ದೇನೆ. ಈ ಕೇಂದ್ರಗಳಲ್ಲಿ ಹಿರಿಯರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಶೀಘ್ರವೇ ಸರಿಪಡಿಸಲಾಗುವುದು ಎಂದರು ಸಚಿವರು ಇದೇ ವೇಳೆ ಭರವಸೆ ನೀಡಿದರು. ಸಮಾರಂಭದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಡಾ.ಜಿ.ಸಿ.ಪ್ರಕಾಶ್, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ ಉಪಸ್ಥಿತರಿದ್ದರು. - ಸಚಿವರ ಮನವಿಗೆ ಸಿಎಂ ಸ್ಪಂದನೆ
ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ವೃಧ್ಧರಿಗೆ 2000 ರೂಪಾಯಿ ಮಾಶಾಸನ ನೀಡುವ ಕುರಿತು ಗಂಭೀರವಾಗಿ ಪರಿಶೀಲಿಸಲಾಗುವುದು ಎಂದರು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಮನವಿಯನ್ನು ಗಂಭೀರವಾಗಿ ಪರಿಗಣಿಸುತ್ತೇನೆ. ಮುಂದಿನ ಬಜೆಟ್ ನಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ