Belagavi NewsBelgaum NewsEducationKannada NewsKarnataka NewsLatest

*ಯಮಕನಮರಡಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಅತ್ಯಾಧುನಿಕ ಸೌಲಭ್ಯಗಳ ಐಟಿಐ ಕಾಲೇಜು ನೂತನ ಕಟ್ಟಡ ಉದ್ಘಾಟನೆ*

ವಿದ್ಯಾರ್ಥಿಗಳ ಅಭಿವೃದ್ಧಿಗೆ ನಮ್ಮ ಸಹಕಾರ ಸದಾ ಇರಲಿದೆ; ಸಚಿವ ಸತೀಶ್ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ; ಯಮಕನಮರಡಿ: ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಉನ್ನತ ದರ್ಜೆಯ ಸೌಲಭ್ಯ ನೀಡುವಲ್ಲಿ ನಮ್ಮ ಸಹಾಯ, ಸಹಕಾರ ಸದಾ ಇರುತ್ತದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.

ಯಮಕನಮರಡಿ ವಿಧಾನಸಭಾ ಕ್ಷೇತ್ರದ ಠಾಣಾ ಹತ್ತರಗಿ ಗ್ರಾಮದಲ್ಲಿ ನೂತನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ (ಐಟಿಐ) ಕಾಲೇಜಿನ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಉನ್ನತ ಮಟ್ಟದ ಜ್ಞಾನ ಮತ್ತು ಅನುಭವದೊಂದಿಗೆ ಸರ್ವಾಂಗೀಣವಾಗಿ ಅಭಿವೃದ್ಧಿ ಹೊಂದಲು ಉನ್ನತ ದರ್ಜೆಯ ಸೌಲಭ್ಯಗಳನ್ನು ಒದಗಿಸುತ್ತ ಬಂದಿರುವುದು ಹೆಮ್ಮೆಯ ವಿಷಯ. ಅದೇ ನಿಟ್ಟಿನಲ್ಲಿ ಇಂದು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ನೂತನ ಕಟ್ಟಡಗಳಲ್ಲಿ ವಿದ್ಯಾರ್ಥಿಗಳ ಹೆಚ್ಚಿನ ಜ್ಞಾನಾರ್ಜನೆಗಾಗಿ ಆಧುನಿಕ ಮಾಹಿತಿ ತಂತ್ರಜ್ಞಾನ ಹಾಗೂ ಆಧುನಿಕ ಸೌಲಭ್ಯ ಅಳವಡಿಸಿಕೊಳ್ಳಲು ಅನುಕೂಲ ಆಗುತ್ತದೆ ಎಂದರು.

ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಕಾಲೇಜಿನಲ್ಲಿ ಓದಿದ ಎಲ್ಲಾ ವಿದ್ಯಾರ್ಥಿಗಳಿಗೆ ಉದ್ಯೋಗ ಸಿಕ್ಕಿದೆ. ಹೀಗಾಗಿ 40 ಸೀಮಿತವಾದ ವಿದ್ಯಾರ್ಥಿಗಳ ಸಂಖ್ಯೆಯನ್ನು ಇನ್ನಷ್ಟು ಹೆಚ್ಚಿಸಲು ಪ್ರಯತ್ನಿಸಲಾಗುದು, ಇನ್ನು ಸತೀಶ್‌ ಜಾರಕಿಹೊಳಿ ಪೌಂಡೇಶನ್‌ ನಿಂದ ಕ್ಷೇತ್ರದ ಎಲ್ಲಾ ದೇವಸ್ಥಾನ, ಸಂಘ, ಸಂಸ್ಥೆಗಳಿಗೆ, ಶಾಲೆಗಳಿಗೂ ಕುರ್ಚಿ, ಡೇಸ್ಕ್‌, ಸೌಂಡ್‌ ಬಾಕ್ಸ್‌ ವಿತರಿಸಲಾಗಿದ್ದು, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಕಾಲೇಜಿಗೂ ಬೇಕಾದ ಸೌಕರ್ಯಗಳನ್ನು ನಮ್ಮ ಪೌಂಡೇಶನ್‌ ವತಿಯಿಂದ ನೀಡಲಾಗುವುದು ಎಂದು ಭರವಸೆ ನೀಡಿದರು.

ನನ್ನ ರಾಜಕೀಯ ಜೀವನದಲ್ಲಿ ಯಾವುದೇ ವಿಷಯಕ್ಕೆ ಅಧಿಕಾರಿಗಳಿಗೆ ಇಷ್ಟೊಂದು ಕರೆ ಮಾಡಿಲ್ಲ. ಆದರೆ ಹತ್ತರಗಿ ಗ್ರಾಮದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಅಭಿವೃದ್ಧಿಗಾಗಿ ಆಸಕ್ತಿ ವಹಿಸಿದ್ದರಿಂದ ಇಂದು ಈ ಸಂಸ್ಥೆ ಹೆಮ್ಮರವಾಗಿ ಬೆಳೆದಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ನಂತರ ಯಮಕನಮರಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಹತ್ತರಗಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು, ರವೀಂದ್ರ ಜೀಂಡ್ರಾಳೆ, ಮಹಾದೇವ ಪಟೋಳಿ, ಈರಣ್ಣಾ ಬಿಸಿರೊಟ್ಟಿ ಸೇರಿದಂತೆ ಹತ್ತರಗಿ, ಯಮಕನಮರಡಿ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button