*ಅರಮನೆ ಅಂಬಾರಿ ಹೇಳಿಕೆಗೆ ಬದ್ಧ*: *ಕ್ಷಮೆ ಕೇಳಲ್ಲ ಎಂದ ಯತೀಂದ್ರ; ಪ್ರತಿಭಟನೆ ಕೈಬಿಡಲು ಪ್ರಮೋದಾದೇವಿ ಮನವಿ*

ಪ್ರಗತಿವಾಹಿನಿ ಸುದ್ದಿ: ಮೈಸೂರು ಅರಮನೆ ಮತ್ತು ಅಂಬಾರಿ ವಿಚಾರದಲ್ಲಿ ನೀಡಿರುವ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ. ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ನನ್ನ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ. ಕೆಲವರು ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಮಾಧ್ಯಮಗಳೊಂದಿಗೆ ಮಾತನಾಡಿದ ಯತೀಂದ್ರ ಸಮರ್ಥಿಸಿಕೊಂಡಿದ್ದಾರೆ.
ಮೈಸೂರು ಅರಮನೆ ಸರ್ಕಾರದ ಆಸ್ತಿ ಎಂಬ ವಿಚಾರವನ್ನು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ಪ್ರಜ್ಞಾಪೂರ್ವಕವಾಗಿಯೇ ಮಾತನಾಡಿದ್ದು, ತಪ್ಪು ಮಾಡಿದ್ದರೆ ಕ್ಷಮೆ ಕೇಳಬಹುದಿತ್ತು. ಆದರೆ ತಪ್ಪೇ ಮಾಡದಿರುವಾಗ ಕ್ಷಮೆ ಕೇಳುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಅರಮನೆ ಸ್ವಾಧೀನ ಕಾಯ್ದೆಯ ಪ್ರಕಾರವೇ ಮಾತನಾಡಿದ್ದು, ಅರಮನೆ ಮತ್ತು ಅಂಬಾರಿ ಕುರಿತು ಯಾವುದೇ ತಪ್ಪು ಹೇಳಿಕೆ ನೀಡಿಲ್ಲ ಎಂದು ತಿಳಿಸಿದ್ದಾರೆ.
ರಾಜಮನೆತನದೊಂದಿಗೆ ಮುಖ್ಯಮಂತ್ರಿಗಳೇ ಮಾತನಾಡುವುದಾಗಿ ಹೇಳಿದ್ದಾರೆ. ಹೀಗಾಗಿ ತಾವು ಪ್ರತ್ಯೇಕವಾಗಿ ತೆರಳಿ ಮಾತನಾಡುವ ಅಗತ್ಯವಿಲ್ಲ ಎಂದಿದ್ದಾರೆ. ಸರ್ಕಾರಿ ಕಾರ್ಯಕ್ರಮವನ್ನು ಏಳು ದಿನಗಳ ಕಾಲ ನಡೆಸುವಂತೆ ಹಾಗೂ ಅಂಬಾರಿ ನೀಡುವುದಿಲ್ಲ ಎಂದು ಪತ್ರ ಬರೆಯಲಾಗಿತ್ತು. ಆ ಪತ್ರಕ್ಕೆ ಪ್ರತಿಕ್ರಿಯೆಯಾಗಿ ಮಾತನಾಡಿದ್ದೇನೆ. ಅಂಬಾರಿ ಇಲ್ಲದೆ ಜಂಬೂಸವಾರಿ ನಡೆಸಲು ಸಾಧ್ಯವಿಲ್ಲ. ಇದು ಪ್ರಜಾಪ್ರಭುತ್ವದ ವ್ಯವಸ್ಥೆಯಾಗಿದ್ದು, ಜನರಿಗಾಗಿ ದಸರಾ ಆಚರಿಸಲಾಗುತ್ತದೆ ಎಂದು ತಮ್ಮ ನಿಲುವನ್ನು ಪುನರುಚ್ಚರಿಸಿದ್ದಾರೆ.
ಇದೇ ವೇಳೆ, ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯನ್ನು ಖಂಡಿಸಿ ಮೈಸೂರಿನಲ್ಲಿ ನಾಳೆ ಆಯೋಜಿಸಿರುವ ಪ್ರತಿಭಟನೆಯನ್ನು ಕೈಬಿಡುವಂತೆ ಪ್ರಮೋದಾದೇವಿ ಒಡೆಯರ್ ಮನವಿ ಮಾಡಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಇತ್ತೀಚಿನ ಬೆಳವಣಿಗೆಗಳ ಸಂದರ್ಭದಲ್ಲಿ ತಮಗೆ ಮತ್ತು ಕುಟುಂಬಕ್ಕೆ ಬೆಂಬಲವಾಗಿ ನಿಂತು ಒಗ್ಗಟ್ಟು ಪ್ರದರ್ಶಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.
ಪ್ರಸ್ತುತ ಪರಿಸ್ಥಿತಿಯಲ್ಲಿ ಎಲ್ಲ ವಿಚಾರಗಳು ತಿಳಿಯಾಗಲು ಅವಕಾಶ ನೀಡಬೇಕು. ವಿವಾದವನ್ನು ಮತ್ತಷ್ಟು ಉಲ್ಬಣಗೊಳಿಸುವ ಅಥವಾ ರಾಜಕೀಯಗೊಳಿಸುವ ಪ್ರಯತ್ನಗಳು ಪರಿಸ್ಥಿತಿಯನ್ನು ಬಿಗಡಾಯಿಸಬಹುದು ಎಂದು ಪ್ರಮೋದಾದೇವಿ ಅಭಿಪ್ರಾಯಪಟ್ಟಿದ್ದಾರೆ. ಯಾವುದೇ ತಪ್ಪು ತಿಳಿವಳಿಕೆಗಳಿದ್ದರೂ ಪರಸ್ಪರ ಮಾತುಕತೆ ಮತ್ತು ತಿಳಿವಳಿಕೆಯ ಮೂಲಕ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಬಹುದು. ಈ ಹಿನ್ನೆಲೆಯಲ್ಲಿ ನಿಗದಿತ ಪ್ರತಿಭಟನೆಯನ್ನು ಹಿಂಪಡೆಯುವುದು ಸೂಕ್ತ ಎಂದು ಮನವಿ ಮಾಡಿದ್ದಾರೆ.
ಪ್ರಸ್ತುತ ಬೆಳವಣಿಗೆಗಳ ಬಿಸಿ ತಣ್ಣಗಾದ ಬಳಿಕ, ಸಾರ್ವಜನಿಕರ ವಿವಿಧ ವಲಯಗಳಿಂದ ವ್ಯಕ್ತವಾಗುತ್ತಿರುವ ಭಾವನೆಗಳಿಗೆ ಧಕ್ಕೆಯಾಗದ ರೀತಿಯಲ್ಲಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿ ಈ ವಿಚಾರದಲ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸುವುದಾಗಿ ಪ್ರಮೋದಾದೇವಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




