ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಫೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದು ಮಧ್ಯಾಹ್ನ 2 ಗಂಟೆ ಅತ್ಯಂತ ಮಹತ್ವದ ಸಮಯವಾಗಿದೆ.
ಯಡಿಯೂರಪ್ಪ ಅವರನ್ನು ಬಂಧಿಸಲು ಈಗಿರುವ ತಡೆಯಾಜ್ಞೆ ತೆರವುಗೊಳಿಸುವ ವಿಚಾರವಾಗಿ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಯಡಿಯೂರಪ್ಪ ಬಂಧನಕ್ಕೆ ಇರುವ ತಡೆಯಾಜ್ಞೆ ತೆರವುಗೊಳಿಸಬೇಕೆಂದು ಪ್ರಕರಣದ ವಿಚಾರಣೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ. ಇಂದೇ ವಿಚಾರಣೆ ನಡೆಸಿ, ತಡೆಯಾಜ್ಞೆ ತೆರವು ಮಾಡಬೇಕೆಂದು ಕೋರಲಾಗಿದ್ದು, ಮಧ್ಯಾಹ್ನ 2 ಗಂಟೆಗೆ ವಿಚಾರಣೆಗೆ ಬರುವ ಸಾಧ್ಯತೆ ಇದೆ.
ಯಡಿಯೂರಪ್ಪ ಅವರು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಸಿಐಡಿ ತನಿಖೆ ನಡೆಯುತ್ತಿದೆ. ಆದರೆ ಅವರನ್ನು ಬಂಧಿಸದಂತೆ ಕೋರ್ಟ್ ಈ ಹಿಂದೆ ತಡೆಯಾಜ್ಞೆ ನೀಡಿ, ವಿಚಾರಣೆಗೆ ಸಹಕರಿಸುವಂತೆ ಸೂಚಿಸಿತ್ತು. ಆದರೆ ಇದೀಗ ಫೋಕ್ಸೋ ಪ್ರಕರಣ ಗಂಭೀರವಾಗಿರುವುದರಿಂದ ಬಂಧಿಸುವ ಅಗತ್ಯವಿದೆ ಎಂದು ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಕೋರಿದ್ದು, ಯಡಿಯೂರಪ್ಪ ಅವರು ಮತ್ತೆ ಜೈಲಿಗೆ ಹೋಗುತ್ತಾರೆಯೇ ಎನ್ನುವ ಪ್ರಶ್ನೆ ಎದುರಾಗಿದೆ.
ಯಡಿಯೂರಪ್ಪ ಮೇಲಿನ ಪೋಕ್ಸೋ ಪ್ರಕರಣ ಈಚೆಗೆ ಸಿಎಂ ಸಿದ್ದರಾಮಯ್ಯ ಅವರಿಂದಲೂ ವ್ಯಂಗ್ಯಕ್ಕೆ ಕಾರಣವಾಗಿದ್ದನ್ನು ಇಲ್ಲಿ ಸ್ಮರಿಸಬಹುದು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ