*ಯೆಲ್ಲೋ ಅಲರ್ಟ್ ಘೋಷಣೆ: ಕಟ್ಟೆಚ್ಚರ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಇಂದು, ನಾಳೆ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಸಾರ್ವಜನಿಕರು ಹಾಗೂ ಮೀನುಗಾರರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲೂ ಮಳೆಯ ಅಬ್ಬರ ಹೆಚ್ಚಾಗುವ ನಿರೀಕ್ಷೆಯಿದ್ದು, ಬಹುತೇಕ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ.
ಇನ್ನು ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೆಲವೆಡೆ ಮೋಡ ಕವಿದ ವಾತಾವರಣದ ಜೊತೆಗೆ ಗಾಳಿ ಬೀಸುವ ಸಾಧ್ಯತೆಯೂ ಇದೆ.
ಸೆಪ್ಟೆಂಬರ್ 27ರಂದು ಕೂಡ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ. ಕರಾವಳಿ ಪ್ರದೇಶಗಳಲ್ಲಿ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ನದಿ ಪಾತ್ರ, ತಗ್ಗು ಪ್ರದೇಶ ಹಾಗೂ ಮಳೆ ಪೀಡಿತ ಪ್ರದೇಶಗಳಲ್ಲಿ ವಾಸಿಸುವ ಜನರು ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



