ಯೋಗೇಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂನಲ್ಲಿ ಹಿನ್ನಡೆ

ಪ್ರಗತಿವಾಹಿನಿ ಸುದ್ದಿ: ಧಾರವಾಡ ಜಿಲ್ಲಾ ಪಂಚಾಯತ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಸಚಿವ, ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಹೊರಿಸಿರುವ ಆರೋಪ ಸರಿ ಇದೆ ಎಂದಿರುವ ಸುಪ್ರೀಂಕೋರ್ಟ್, ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದೆ. ಈ ಮೂಲಕ ವಿನಯ್ ಕುಲಕರ್ಣಿಗೆ ಸಂಕಷ್ಟ ಹೆಚ್ಚಿದೆ.
ವಿಚಾರಣಾ ನ್ಯಾಯಾಲಯದ ತೀರ್ಪನ್ನು ಈ ಹಿಂದೆ ಎತ್ತಿಹಿಡಿದಿದ್ದ ಹೈಕೋರ್ಟ್ ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾದ ಪಿ.ವಿ.ಸಂಜಯ್ ಕುಮಾರ್, ಅಗಸ್ವಿನ್ ಜಾರ್ಜ್ ಮಸೀಹ್ ಅವರಿದ್ದ ಪೀಠ ನಿರಾಕರಿಸಿದೆ. ಸಿಬಿಐ ವಿಶೇಷ ನ್ಯಾಯಾಲಯದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಕೂಡ ಎತ್ತಿಹಿಡಿದಿತ್ತು.
ತಮ್ಮ ವಿರುದ್ಧ ಹೊರಿಸಲಾಗಿರುವ ದೋಷಾರೋಪ ಮತ್ತು ವಿಶೇಷ ನ್ಯಾಯಾಲಯದಲ್ಲಿ ನಡೆಯಲಿರುವ ವಿಚಾರಣಾ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಕೋರಿ ಹೈಕೋರ್ಟ್‌ಗೆ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು.
ಏ.8ರಂದು ಪ್ರಕರಣದ ಅರ್ಜಿ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ನ್ಯಾಯಪೀಠ, ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಚಾರ್ಜ್ ಶೀಟ್ ಕೈಬಿಡಲು ನಿರಾಕರಿಸಿತ್ತು. ಹೀಗಾಗಿ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಸುಪ್ರೀಂ ಕೋರ್ಟ್ ಕೂಡ ವಿಚಾರಣಾ ನ್ಯಾಯಾಲಯದ ತೀರ್ಪನ್ನೇ ಎತ್ತಿ ಹಿಡಿದಿದೆ.
ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ 2016 ರ ಜೂನ್ 15ರಂದು ಜಿಮ್ ಒಂದರಲ್ಲಿ ಕೊಲೆಯಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿ 2020ರ ನವೆಂಬರ್‌ನಲ್ಲಿ ವಿನಯ್ ಕುಲಕರ್ಣಿ ಅವರ ಬಂಧನವಾಗಿತ್ತು. ಅವರು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಒಂಬತ್ತು ತಿಂಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದರು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ಒಟ್ಟು 21 ಆರೋಪಿಗಳ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು.
ಕೊಲೆ ಪ್ರಕರಣದಲ್ಲಿ ಆರೋಪಿಯಾದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ಈ ಹಿಂದೆ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು.
ಬಿಜೆಪಿ ಕಾರ್ಯಕರ್ತ ಯೋಗಿಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ತೀವ್ರ ಹಿನ್ನಡೆಯಾಗಿದೆ. ವಿನಯ್ ಕುಲಕರ್ಣಿ ವಿರುದ್ಧ ಹೊರಿಸಿರುವ ಆರೋಪ ಸರಿ ಇದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಈ ಮೂಲಕ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪನ್ನು ಸೋಮವಾರ ಎತ್ತಿ ಹಿಡಿದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ