Kannada NewsKarnataka NewsLatestNational

*ಮೆಟಾ ಕಚೇರಿಗೆ ಯುವ ಕಾಂಗ್ರೆಸ್‌ ಮುತ್ತಿಗೆ*: *ಹೂವಿನ ಕುಂಡಗಳನ್ನೇ ಎಸೆದ ಕಾರ್ಯಕರ್ತರು*

ಪ್ರಗತಿವಾಹಿನಿ ಸುದ್ದಿ: ಯುವ ಕಾಂಗ್ರೆಸ್ ನಾಯಕರ ಸಾಮಾಜಿಕ ಜಾಲತಾಣ ಖಾತೆಗಳನ್ನು ಸ್ಥಗಿತಗೊಳಿಸಿರುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಜಿಟಲ್ ವೇದಿಕೆಗಳಲ್ಲೂ ರಾಜಕೀಯ ನಡೆಯುತ್ತಿದೆಯೇ ಎಂಬ ಪ್ರಶ್ನೆ ಎತ್ತಿರುವ ಕಾರ್ಯಕರ್ತರು, ಮೆಟಾ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಹೈದರಾಬಾದ್‌ನ ಮೆಟಾ ಕಚೇರಿ ಎದುರು ಪ್ರತಿಭಟನೆ ವೇಳೆ ಆಕ್ರೋಶದ ಕಿಡಿ ಹೆಚ್ಚಾಗಿ, ಕಚೇರಿ ಆವರಣದಲ್ಲಿದ್ದ ಹೂವಿನ ಕುಂಡಗಳನ್ನು ಎಸೆದು ಧ್ವಂಸಗೊಳಿಸಿದ್ದಾರೆ. ಒಂದು ವಾರದೊಳಗೆ ನಿರ್ಬಂಧ ತೆರವುಗೊಳಿಸದಿದ್ದರೆ ಹೋರಾಟ ತೀವ್ರಗೊಳಿಸುವ ಎಚ್ಚರಿಕೆಯನ್ನೂ ನೀಡಿದ್ದಾರೆ. ಈ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ರಾಷ್ಟ್ರೀಯ ಉಸ್ತುವಾರಿ ಮನೀಶ್ ಶರ್ಮಾ ಅವರ ಸಾಮಾಜಿಕ ಜಾಲತಾಣ ಖಾತೆಗಳ ಮೇಲೆ ಮೆಟಾ ನಿರ್ಬಂಧ ವಿಧಿಸಿದೆ. ಇದನ್ನು ವಿರೋಧಿಸಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಜಕ್ಕಿಡಿ ಶಿವಚರಣ್ ರೆಡ್ಡಿ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಮೆಟಾ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಒಂದು ವಾರದೊಳಗೆ ಸಾಮಾಜಿಕ ಜಾಲತಾಣ ಖಾತೆಗಳನ್ನು ಸರಿಪಡಿಸಬೇಕು ಹಾಗೂ ಅಳಿಸಲಾದ ಪೋಸ್ಟ್‌ಗಳನ್ನು ಮರುಸ್ಥಾಪಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಬೇಡಿಕೆ ಈಡೇರದಿದ್ದರೆ ನ್ಯಾಯಾಲಯದಲ್ಲಿ ಹೋರಾಟ ನಡೆಸುವುದರ ಜೊತೆಗೆ ಬೀದಿಗಿಳಿದು ಪ್ರತಿಭಟನೆ ಮುಂದುವರಿಸುತ್ತೇವೆ. ಮೆಟಾ ಕಚೇರಿಗೂ ನುಗ್ಗುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದೇ ವಿಚಾರವಾಗಿ ಮುಂಬೈನಲ್ಲೂ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಬಿಕೆಸಿಯಲ್ಲಿರುವ ಮೆಟಾ ಕಚೇರಿ ಹೊರಗೆ ಮುಂಬೈ ಯುವ ಕಾಂಗ್ರೆಸ್ ಅಧ್ಯಕ್ಷೆ ಜೀನತ್ ಶಬ್ರಿನ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ಟೀಕಿಸುವ ಧ್ವನಿಗಳನ್ನು ಅಡಗಿಸಲು ಖಾತೆಗಳನ್ನು ನಿರ್ಬಂಧಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರತಿಭಟನೆ ವೇಳೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರ ಪೋಸ್ಟರ್ ಸುಟ್ಟುಹಾಕಿ, ಮೆಟಾ ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದೆ ಎಂದು ಘೋಷಣೆ ಕೂಗಿದ್ದಾರೆ.

ಈ ಬೆಳವಣಿಗೆಗೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕೂಡ ಪ್ರತಿಕ್ರಿಯಿಸಿದ್ದಾರೆ. ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ವಿದೇಶಿ ಕಂಪನಿಗಳು ಭಾರತದಲ್ಲಿ ರಾಜಕೀಯ ಮಾಡದೆ ವ್ಯವಹಾರ ನಡೆಸಬೇಕು. ಎಲ್ಲರನ್ನೂ ಸಮಾನವಾಗಿ ಕಾಣಬೇಕು ಎಂದು ಹೇಳಿದ್ದಾರೆ. ಸರ್ಕಾರವೂ ವಿದೇಶಿ ಕಂಪನಿಗಳ ಮೇಲೆ ಅನಗತ್ಯ ಒತ್ತಡ ಹೇರುವ ಮೂಲಕ ಅವುಗಳ ವ್ಯವಹಾರವನ್ನು ರಾಜಕೀಯಗೊಳಿಸಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಇನ್ನು, ಯುವ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಹೈದರಾಬಾದ್‌ನ ಮೆಟಾ ಕಚೇರಿ ಮೇಲೆ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ಬಿಜೆಪಿ ವಕ್ತಾರ ಪ್ರದೀಪ್ ಭಂಡಾರಿ ಆರೋಪಿಸಿದ್ದಾರೆ. ದಾಳಿಯ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಲಾಗುತ್ತಿದೆ. ಕಾಂಗ್ರೆಸ್ ಗೂಂಡಾಗಳ ಪಕ್ಷ ಎಂಬುದಕ್ಕೆ ಈ ಘಟನೆ ಸಾಕ್ಷಿ ಎಂದು ಟೀಕಿಸಿದ್ದಾರೆ.

Related Articles

Back to top button