Karnataka NewsLatestPolitics

*ಆಡಿಯೋ ವೈರಲ್ ಬಗ್ಗೆ ಸ್ಪಷ್ಟನೆ ನೀಡಿದ ಜಮೀರ್ ಅಹ್ಮದ್*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಚಿವ ಜಮೀರ್ ಅಹ್ಮದ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಇದೀಗ ಕಾಂಗ್ರೆಸ್ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ದಾವಣಗೆರೆ ಉಪಚುನಾವಣೆ ವೇಳೆ ಜಮೀರ್ ಅಹಮದ್‌ ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಆರೋಪ ಕೇಳಿಬಂದಿದೆ.

ದಾವಣಗೆರೆ ದಕ್ಷಿಣ ಉಪ ಚುನಾವಣೆಯ ಸಂದರ್ಭದಲ್ಲಿ ಜಮೀರ್ ಅಹ್ಮದ್ ಮಾತನಾಡಿದ್ದಾರೆ ಎಂಬ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಾಂಗ್ರೆಸ್​​ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ದಾವಣಗೆರೆಯ ಕಾಂಗ್ರೆಸ್ ಮುಖಂಡ ಸಿರಾಜ್ ಜೊತೆ ಜಮೀರ್ ಅಹಮ್ಮದ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಇದಾಗಿದ್ದು, ಆಡಿಯೋದಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಪಕ್ಷೇತರ ಅಭ್ಯರ್ಥಿಗೆ ಬೆಂಬಲಿಸಿ ಮಾತನಾಡಲಾಗಿದೆ. ಮುಸ್ಲಿಂ ವೋಟಿಂಗ್ ಕಡಿಮೆ ಇದೆ ಹೊರಗಡೆ ಬಂದ್ರೆ ಅವರನ್ನ ನಂಬೋಕಾಗಲ್ಲ ಕಾಂಗ್ರೆಸ್‌ಗೆ ವೋಟ್ ಹಾಕುತ್ತಾರೆ. ಒತ್ತಾಯ ಮಾಡಿ ಮನೆಯಿಂದ ಕರ್ಕೊಂಡು ಬರಬೇಡಿ. ಪಕ್ಷೇತರರಿಗೆ ಎಸ್‌ಡಿಪಿಐಗೆ ವೋಟ್ ಹಾಕಲಿ ಎಂದು ಜಮೀರ್ ಅಹಮ್ಮದ್ ಹೇಳಿದ್ದಾರೆ ಎನ್ನಲಾಗಿದೆ.

ಆಡಿಯೋ ವೈರಲ್ ವಿಚಾರವಾಗಿ ಜಮೀರ್ ಅಹಮ್ಮದ್ ಖಾನ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ರಾಜ್ಯದ ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ನನ್ನ ಕುರಿತ ಆಡಿಯೋ ನಕಲಿ. ಎಐ ತಂತ್ರಜ್ಞಾನ ಬಳಸಿ ಮಾಡಲಾಗಿದೆ. ಇದೊಂದು ರಾಜಕೀಯ ಷಡ್ಯಂತ್ರ. ನಕಲಿ ಆಡಿಯೋ ಮಾಡಿ ವೈರಲ್ ಮಾಡಿರುವವರ ವಿರುದ್ಧ ಸೈಬರ್ ಠಾಣೆಗೆ ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಆಡಿಯೋ ಬಗ್ಗೆ ಯಾವ ತನಿಖೆಗೆ ಬೇಕಾದರೂ ಒಳಪಡಿಸಲಿ. ನಾನು ಆ ರೀತಿ ಮಾತನಾಡಿಲ್ಲ. ಗೊಂದಲ ಉಂಟು ಮಾಡಲು ಇದೆಲ್ಲವೂ ಸೃಷ್ಟಿ ಮಾಡಲಾಗಿದ್ದು, ಇದು ಕಿಡಿಗೇಡಿಗಳ ಕೃತ್ಯ, ಇದನ್ನು ಯಾರೂ ನಂಬಬಾರದು ಎಂದು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button