Kannada NewsKarnataka NewsLatestNational

*ಆದಾಯಕ್ಕಿಂತ ಅಧಿಕ ಆಸ್ತಿ ಆರೋಪ*: *ರಾಹುಲ್ ಗಾಂಧಿ ವಿರುದ್ಧದ ಪ್ರಕರಣಕ್ಕೆ ಸುಪ್ರೀಂ ತಿರುವು*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧದ ಅಕ್ರಮ ಆಸ್ತಿ ಆರೋಪ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ತನಿಖೆಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ನಿರ್ದೇಶನಗಳಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಪ್ರಕರಣದ ವಿಚಾರಣೆಯಲ್ಲೇ ಈಗ ಹೊಸ ಬದಲಾವಣೆಗೆ ಸೂಚನೆ ನೀಡಿದೆ. ಅರ್ಜಿಯ ವಿಚಾರಣೆಯನ್ನು ಮತ್ತೊಮ್ಮೆ ಆರಂಭಿಸುವಂತೆ ಹೈಕೋರ್ಟ್‌ಗೆ ನಿರ್ದೇಶಿಸಿರುವ ಸುಪ್ರೀಂ ಕೋರ್ಟ್, ರಾಹುಲ್ ಗಾಂಧಿ ಅವರ ವಾದ ಆಲಿಸುವುದನ್ನೂ ಕಡ್ಡಾಯಗೊಳಿಸಿದೆ.

ಆದಾಯದ ಮೂಲಗಳಿಗೆ ಹೋಲಿಸಿದರೆ ರಾಹುಲ್ ಗಾಂಧಿ ಅಕ್ರಮವಾಗಿ ಹೆಚ್ಚಿನ ಆಸ್ತಿ ಹೊಂದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮೂಲದ ಬಿಜೆಪಿ ಕಾರ್ಯಕರ್ತ ಎಸ್. ವಿಗ್ನೇಶ್ ಶಿಶಿರ್ ಅರ್ಜಿ ಸಲ್ಲಿಸಿದ್ದರು. ಈ ಆರೋಪಗಳ ಕುರಿತು ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ತನಿಖೆ ನಡೆಸುವಂತೆ ನಿರ್ದೇಶನ ನೀಡಬೇಕೆಂದು ಅವರು ನ್ಯಾಯಾಲಯವನ್ನು ಕೋರಿದ್ದರು.

ಅರ್ಜಿಯ ವಿಚಾರಣೆ ನಡೆಸಿದ್ದ ಅಲಹಾಬಾದ್ ಹೈಕೋರ್ಟ್, ಆರೋಪಗಳನ್ನು ಕಾನೂನಿನ ಪ್ರಕಾರ ಪರಿಶೀಲಿಸುವಂತೆ ಸಿಬಿಐ ಮತ್ತು ಇಡಿಗೆ ಸೂಚಿಸಿತ್ತು. ಅಲ್ಲದೆ, ತನಿಖೆಯ ಪ್ರಗತಿ ಕುರಿತು ನ್ಯಾಯಾಲಯಕ್ಕೆ ಮಾಹಿತಿ ನೀಡುವಂತೆಯೂ ನಿರ್ದೇಶಿಸಿತ್ತು.

ನಂತರ ಸಿಬಿಐ ಸಲ್ಲಿಸಿದ್ದ ಅಫಿಡವಿಟ್‌ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಹೈಕೋರ್ಟ್, ತನಿಖೆಯ ಪ್ರಗತಿ ಕುರಿತು ಹೊಸ ಅಫಿಡವಿಟ್ ಸಲ್ಲಿಸುವಂತೆ ಸೂಚಿಸಿತ್ತು. ಈ ನಿರ್ದೇಶನಗಳನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಆಗಸ್ಟ್ 17ರಂದು ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಅಲಹಾಬಾದ್ ಹೈಕೋರ್ಟ್‌ನ ವಿಚಾರಣೆಗೆ ತಡೆ ನೀಡಿತ್ತು. ಅಲ್ಲದೆ, ಹೈಕೋರ್ಟ್‌ನ ಹಿಂದಿನ ನಿರ್ದೇಶನದಂತೆ ಯಾವುದೇ ವರದಿ ಸಲ್ಲಿಸದಂತೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯಕ್ಕೆ ಸೂಚಿಸಿತ್ತು.

ಇದೀಗ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಹಾಗೂ ವಿ. ಮೊಹನಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಮಹತ್ವದ ಆದೇಶ ನೀಡಿದೆ. ಅಲಹಾಬಾದ್ ಹೈಕೋರ್ಟ್ ಈ ಹಿಂದೆ ನೀಡಿದ್ದ ನಿರ್ದೇಶನಗಳನ್ನು ರದ್ದುಗೊಳಿಸಿ, ಪ್ರಕರಣವನ್ನು ಮರುಪರಿಶೀಲನೆಗಾಗಿ ಅದೇ ಹೈಕೋರ್ಟ್‌ಗೆ ಮರಳಿಸಿದೆ.

ಅರ್ಜಿಯ ವಿಚಾರಣೆಯನ್ನು ಹೊಸದಾಗಿ ನಡೆಸಬೇಕು. ಈ ಪ್ರಕ್ರಿಯೆಯಲ್ಲಿ ರಾಹುಲ್ ಗಾಂಧಿ ಅವರನ್ನೂ ಪಕ್ಷಕಾರರನ್ನಾಗಿ ಸೇರಿಸಿಕೊಳ್ಳಬೇಕು. ಅವರ ವಾದವನ್ನು ಆಲಿಸಿದ ಬಳಿಕವೇ ಮುಂದಿನ ಆದೇಶ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ಹೀಗಾಗಿ ರಾಹುಲ್ ಗಾಂಧಿ ವಿರುದ್ಧದ ಆಸ್ತಿ ಆರೋಪ ಪ್ರಕರಣ ಇದೀಗ ಮತ್ತೆ ಅಲಹಾಬಾದ್ ಹೈಕೋರ್ಟ್‌ನಲ್ಲಿ ಹೊಸದಾಗಿ ವಿಚಾರಣೆಗೆ ಒಳಪಡಲಿದೆ. ಪ್ರಕರಣದ ಮುಂದಿನ ನಡೆ ಏನಾಗಲಿದೆ ಎಂಬ ಕುತೂಹಲ ಮೂಡಿದೆ.

Related Articles

Back to top button