
ರಾಜ್ಯದಲ್ಲಿ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿರುವ ರಾಜ್ಯ ಸರ್ಕಾರ, ಆರು ಮಂದಿ ಐಎಎಸ್ ಅಧಿಕಾರಿಗಳ ಹುದ್ದೆಗಳಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಕೆಲ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದರೆ, ಇನ್ನು ಕೆಲವರಿಗೆ ಹೆಚ್ಚುವರಿ ಜವಾಬ್ದಾರಿಗಳನ್ನು ವಹಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.
ಈ ವರ್ಗಾವಣೆಯಲ್ಲಿ ಪ್ರಮುಖವಾಗಿ ಅಂಜುಮ್ ಪರ್ವೇಜ್ ಅವರಿಗೆ ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆಯ ಜವಾಬ್ದಾರಿ ನೀಡಲಾಗಿದ್ದು, ಇದರ ಜೊತೆಗೆ ಲೋಕೋಪಯೋಗಿ ಇಲಾಖೆಯ ಹೆಚ್ಚುವರಿ ಹೊಣೆಗಾರಿಕೆಯನ್ನೂ ವಹಿಸಲಾಗಿದೆ. ಇನ್ನು ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿದ್ದ ರಾಜೇಂದರ್ ಕುಮಾರ್ ಕಟಾರಿಯಾ ಅವರನ್ನು ಒಳಾಡಳಿತ (ಗೃಹ) ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.
- ಅಂಜುಮ್ ಪರ್ವೇಜ್: ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಲೋಕೋಪಯೋಗಿ ಇಲಾಖೆಯ ಹೆಚ್ಚುವರಿ ಹೊಣೆಗಾರಿಕೆ.
- ರಾಜೇಂದರ್ ಕುಮಾರ್ ಕಟಾರಿಯಾ: ಒಳಾಡಳಿತ (ಗೃಹ) ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ.
- ಮಹೇಶ್ವರ ರಾವ್ ಎಂ.: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರ ಹಾಲಿ ಹುದ್ದೆಯ ಜತೆಗೆ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಹೆಚ್ಚುವರಿ ಹೊಣೆಗಾರಿಕೆ.
- ಕೃಷ್ಣ ಬಾಜಪೈ: ಕರ್ನಾಟಕ ಮೇಲ್ಮನವಿ ನ್ಯಾಯಾಧಿಕರಣದ ಅಧ್ಯಕ್ಷರು.
- ಡಾ. ಗಿರೀಶ್ ದಿಲೀಪ್ ಬಡೋಲೆ: ವಿಜ್ಞಾನ ಮತ್ತು ತಂತ್ರಜ್ಞಾನ, ಎಲೆಕ್ಟ್ರಾನಿಕ್ಸ್, ಐಟಿ ಮತ್ತು ಬಿಟಿ ಇಲಾಖೆಗಳ ನಿರ್ದೇಶಕರ ಹೆಚ್ಚುವರಿ ಹೊಣೆಗಾರಿಕೆ.
- ಅಪರ್ಣಾ ರಮೇಶ್: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಮಾಹಿತಿ ತಂತ್ರಜ್ಞಾನ ವಿಭಾಗದ ನಿರ್ದೇಶಕರ ಹೆಚ್ಚುವರಿ ಹೊಣೆಗಾರಿಕೆ.
ಮಹೇಶ್ವರ ರಾವ್ ಅವರಿಗೆ ಹೆಚ್ಚುವರಿ ಜವಾಬ್ದಾರಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾಗಿರುವ ಎಂ. ಮಹೇಶ್ವರ ರಾವ್ ಅವರಿಗೆ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.
ಇತರ ಅಧಿಕಾರಿಗಳಿಗೂ ಹೊಸ ಹೊಣೆ
ಕರ್ನಾಟಕ ಮೇಲ್ಮನವಿ ನ್ಯಾಯಾಧಿಕರಣದ ಸದಸ್ಯರಾಗಿದ್ದ ಕೃಷ್ಣ ಬಾಜಪೈ ಅವರನ್ನು ಇದೀಗ ಅದರ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಅಧ್ಯಕ್ಷರ ಹೆಚ್ಚುವರಿ ಹೊಣೆ ಹೊತ್ತಿದ್ದ ಹರ್ಷ ಗುಪ್ತಾ ಅವರನ್ನು ಆ ಜವಾಬ್ದಾರಿಯಿಂದ ಬಿಡುಗಡೆ ಮಾಡಲಾಗಿದೆ.
ಇನ್ನು ಡಾ. ಗಿರೀಶ್ ದಿಲೀಪ್ ಬಡೋಲೆ ಅವರಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ ಇಲಾಖೆಗಳ ನಿರ್ದೇಶಕರ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಅಪರ್ಣಾ ರಮೇಶ್ ಅವರಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಮಾಹಿತಿ ತಂತ್ರಜ್ಞಾನ ವಿಭಾಗದ ನಿರ್ದೇಶಕರ ಹೊಣೆ ವಹಿಸಲಾಗಿದೆ.
ಈ ಇಬ್ಬರ ನೇಮಕದ ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿ ಭರತ್ ಎಸ್. ಅವರನ್ನು ಈ ಹೆಚ್ಚುವರಿ ಜವಾಬ್ದಾರಿಗಳಿಂದ ಮುಕ್ತಗೊಳಿಸಲಾಗಿದೆ.ರಾಜ್ಯ ಸರ್ಕಾರದ ಈ ಆಡಳಿತಾತ್ಮಕ ಬದಲಾವಣೆಗಳು ವಿವಿಧ ಇಲಾಖೆಗಳ ಕಾರ್ಯನಿರ್ವಹಣೆ ಮತ್ತು ಆಡಳಿತ ವ್ಯವಸ್ಥೆಯಲ್ಲಿ ಮಹತ್ವದ ಪರಿಣಾಮ ಬೀರಲಿವೆ.
Karnataka Govt,IAS Officers,transfer,maheshwar rao,new responsibilies




