*ದಾಂಡಿಯಾ ಸಂಭ್ರಮದಲ್ಲಿ ದುರಂತ*: *ಲೈಟಿಂಗ್ ಕಂಬ ಕುಸಿದು ವಿದ್ಯಾರ್ಥಿನಿ ಸಾವು, ಹಲವರಿಗೆ ಗಾಯ!*

ಪ್ರಗತಿವಾಹಿನಿ ಸುದ್ದಿ: ನವರಾತ್ರಿ ಸಂಭ್ರಮದಲ್ಲಿ ದಾಂಡಿಯಾ ನೃತ್ಯ ಮಾಡುತ್ತಿದ್ದ ವಿದ್ಯಾರ್ಥಿಗಳ ಮೇಲೆ ಬೃಹತ್ ಲೈಟಿಂಗ್ ರಚನೆ ಕುಸಿದು ಭೀಕರ ದುರಂತ ಸಂಭವಿಸಿದೆ. ಘಟನೆಯಲ್ಲಿ ಪ್ರಥಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೃತಪಟ್ಟಿದ್ದು, 14ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸಂಭ್ರಮದಿಂದ ನಡೆಯುತ್ತಿದ್ದ ಕಾಲೇಜಿನ ಸಾಂಸ್ಕೃತಿಕ ಕಾರ್ಯಕ್ರಮ ಕ್ಷಣಾರ್ಧದಲ್ಲಿ ಆತಂಕ ಮತ್ತು ಆಕ್ರಂದನಕ್ಕೆ ಸಾಕ್ಷಿಯಾಗಿದೆ.
ಕಾಲೇಜಿನ ವಾರ್ಷಿಕ ತಾಂತ್ರಿಕ ಮತ್ತು ಸಾಂಸ್ಕೃತಿಕ ಉತ್ಸವದ ಅಂಗವಾಗಿ ದಾಂಡಿಯಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ನೂರಾರು ವಿದ್ಯಾರ್ಥಿಗಳು ಮೈದಾನದಲ್ಲಿ ನೃತ್ಯ ಮಾಡುತ್ತಿದ್ದಾಗ ಸಂಜೆ ಸುಮಾರು 7.30ರ ವೇಳೆಗೆ ಅಲಂಕಾರಿಕ ದೀಪಗಳನ್ನು ಅಳವಡಿಸಿದ್ದ ಬೃಹತ್ ಲೋಹದ ಚೌಕಟ್ಟು ಏಕಾಏಕಿ ಕುಸಿದು ವಿದ್ಯಾರ್ಥಿಗಳ ಮೇಲೆ ಬಿದ್ದ ಘಟನೆ ತೆಲಂಗಾಣದ ಹೈದರಾಬಾದ್ ಹೊರವಲಯದ ನಾದರ್ಗುಲ್ನಲ್ಲಿರುವ ಎಂವಿಎಸ್ಆರ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅಕ್ಟೋಬರ್ 17ರ ರಾತ್ರಿ ನಡೆದಿದೆ.
ಬಲವಾದ ಗಾಳಿಯೇ ರಚನೆ ಕುಸಿಯಲು ಕಾರಣವಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಅವಘಡದಲ್ಲಿ ಸೋನಾ ನಾರಾಯಣ ದಾಸ್ ಎಂಬ ಪ್ರಥಮ ವರ್ಷದ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸೋನಾ ಅವರ ಸಹೋದರಿ ಮೀನಾಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಘಟನೆ ಸಂಭವಿಸುತ್ತಿದ್ದಂತೆಯೇ ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. ಗಾಯಗೊಂಡ ವಿದ್ಯಾರ್ಥಿಗಳಲ್ಲಿ ಕೆಲವರು ಆರಂಭದಲ್ಲಿ ಗಂಭೀರ ಸ್ಥಿತಿಯಲ್ಲಿದ್ದರು. ಬಳಿಕ ಬಹುತೇಕ ಗಾಯಾಳುಗಳ ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಲೈಟಿಂಗ್ ರಚನೆ ಕುಸಿದಿರುವುದಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ಆರಂಭಿಸಿದ್ದಾರೆ.
ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ವಿದ್ಯಾರ್ಥಿನಿಯ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು, ಅವಘಡಕ್ಕೆ ಕಾರಣರಾದವರನ್ನು ಗುರುತಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.
ಬಿಆರ್ಎಸ್ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ ಕೂಡ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಮೃತಪಟ್ಟ ವಿದ್ಯಾರ್ಥಿನಿಯ ಕುಟುಂಬಕ್ಕೆ ಸಂತಾಪ ಸೂಚಿಸಿರುವ ಅವರು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಕಾಲೇಜಿನ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಇಂತಹ ದುರ್ಘಟನೆ ಸಂಭವಿಸಿರುವುದು ಸುರಕ್ಷತಾ ವ್ಯವಸ್ಥೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಬೃಹತ್ ಲೈಟಿಂಗ್ ಚೌಕಟ್ಟನ್ನು ಅಳವಡಿಸುವಾಗ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿತ್ತೇ, ರಚನೆಯ ಭದ್ರತೆಯನ್ನು ಪರಿಶೀಲಿಸಲಾಗಿತ್ತೇ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




