
ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿವಿಧ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ನೇಮಕಾತಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗುತ್ತಿದೆ. ನಾಮನಿರ್ದೇಶನದ ಮೂಲಕ ಸದಸ್ಯರು ಮತ್ತು ನಿರ್ದೇಶಕರಾಗಿ ನೇಮಕಗೊಂಡು ಎರಡು ವರ್ಷಗಳ ಅಧಿಕಾರಾವಧಿ ಪೂರ್ಣಗೊಳಿಸಿರುವವರನ್ನು ಸೇವೆಯಿಂದ ಬಿಡುಗಡೆಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.
ಈ ಸಂಬಂಧ ಮುಖ್ಯಮಂತ್ರಿ ಕಚೇರಿಯಿಂದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಲಾಗಿದೆ. ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರು ಸೋಮವಾರ ಈ ಕುರಿತು ಮುಖ್ಯ ಕಾರ್ಯದರ್ಶಿಗೆ ಟಿಪ್ಪಣಿ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.
ನಿಗಮ ಮಂಡಳಿಯಲ್ಲಿ ಈಗಾಗಲೇ ಎರಡು ವರ್ಷಗಳ ಸೇವಾವಧಿ ಪೂರ್ಣಗೊಳಿಸಿರುವ ಎಲ್ಲ ಸದಸ್ಯರು ಮತ್ತು ನಿರ್ದೇಶಕರನ್ನು ತಕ್ಷಣದಿಂದಲೇ ಪದಮುಕ್ತಗೊಳಿಸಿ, ಈ ಸಂಬಂಧ ಸೂಕ್ತ ಆದೇಶ ಹೊರಡಿಸುವಂತೆ ಸೂಚಿಸಲಾಗಿದೆ.
ಆದರೆ ನಗರಾಭಿವೃದ್ಧಿ ಪ್ರಾಧಿಕಾರಗಳು ಹಾಗೂ ಸ್ಥಳೀಯ ಯೋಜನಾ ಪ್ರಾಧಿಕಾರಗಳಿಗೆ ಈ ಆದೇಶದಿಂದ ವಿನಾಯಿತಿ ನೀಡಲಾಗಿದೆ. ಈ ಎರಡು ವರ್ಗಗಳನ್ನು ಹೊರತುಪಡಿಸಿ ಉಳಿದ ಎಲ್ಲ ನಿಗಮ ಮತ್ತು ಮಂಡಳಿಗಳಿಗೆ ಸೂಚನೆ ಅನ್ವಯವಾಗಲಿದೆ.




