ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಪ್ರಧಾನಮಂತ್ರಿ ನರೇಂದ್ರ ಮೋದಿ ಏಪ್ರಿಲ್ ೧೮ ರಂದು ಹಾಗೂ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಏಪ್ರಿಲ್ ೨೫ ರಂದು ಜಿಲ್ಲೆಗೆ ಭೇಟಿ ನೀಡಲಿದ್ದು, ಸೂಕ್ತ ಭದ್ರತೆ ಸೇರಿದಂತೆ ಎಲ್ಲ ರೀತಿಯ ವ್ಯವಸ್ಥೆಯನ್ನು ಶಿಷ್ಟಾಚಾರದಂತೆ ಕಲ್ಪಿಸಬೇಕು ಎಂದು ಪ್ರಾದೇಶಿಕ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಮಂತ್ರಿಗಳು ಹೆಲಿಕಾಪ್ಟರ್ ಮೂಲಕ ಚಿಕ್ಕೋಡಿಗೆ ತೆರಳಲಿದ್ದಾರೆ. ಅದೇ ರೀತಿ ಉಪರಾಷ್ಟ್ರಪತಿಯವರು ಏಪ್ರಿಲ್ ೨೪ ರಂದು ನಗರಕ್ಕೆ ಆಗಮಿಸಲಿದ್ದು, ೨೫ ರಂದು ಕೆ.ಎಲ್.ಇ. ಸಂಸ್ಥೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಉಭಯ ಗಣ್ಯರು ಭಾಗವಹಿಸುವ ಕಾರ್ಯಕ್ರಮ ಸಂದರ್ಭದಲ್ಲಿ ಯಾವುದೇ ಲೋಪ ಉಂಟಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಭದ್ರತೆಗೆ ಸಂಬಂಧಿಸಿದಂತೆ ಬೆಳಗಾವಿ ನಗರ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೂಕ್ತ ಸಿದ್ಧತೆ ಕೈಗೊಳ್ಳಬೇಕು. ತುರ್ತು ವೈದ್ಯಕೀಯ ಸೌಲಭ್ಯಗಳನ್ನು ಜಿಲ್ಲಾಮಟ್ಟದ ಅಧಿಕಾರಿಗಳೇ ಖುದ್ದಾಗಿ ಪರಿಶೀಲಿಸಿ ವರದಿ ಸಲ್ಲಿಸಬೇಕು. ಪ್ರಧಾನಮಂತ್ರಿಗಳ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಹೆಲಿಪ್ಯಾಡ್ ನಿರ್ಮಾಣ ಹಾಗೂ ನಿರ್ವಹಣೆಯನ್ನು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸಮರ್ಪಕವಾಗಿ ನಿರ್ವಹಿಸಬೇಕು. ಸುರಕ್ಷತೆ ದೃಷ್ಟಿಯಿಂದ ಇದು ಮಹತ್ವದ್ದಾಗಿರುವುದರಿಂದ ಜಿಲ್ಲಾ ಮಟ್ಟದ ಅಧಿಕಾರಿಗಳು ಖುದ್ದಾಗಿ ಸ್ಥಳ ಪರಿಶೀಲಿಸಬೇಕು. ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಆಹಾರ ಸುರಕ್ಷತಾ ಅಧಿಕಾರಿಗಳು ಎಲ್ಲ ಸ್ಥಳದಲ್ಲೂ ಪ್ರತ್ಯೇಕ ತಂಡಗಳನ್ನು ರಚಿಸಿಕೊಂಡು ಆಹಾರ ಸುರಕ್ಷತೆಯ ಬಗ್ಗೆ ಎಚ್ಚರಿಕೆ ವಹಿಸಬೇಕು. ಕಾರ್ಯಕ್ರಮದ ಸ್ಥಳದಲ್ಲಿ ವಿದ್ಯುಚ್ಛಕ್ತಿ ಪೂರೈಕೆ ಸಮರ್ಪಕವಾಗಿ ಇರುವಂತೆ ಕ್ರಮವಹಿಸಬೇಕು ಎಂದು ತುಷಾರ್ ಗಿರಿನಾಥ್ ಸೂಚನೆ ನೀಡಿದರು.
ಐಜಿಪಿ ಎಚ್.ಜಿ. ರಾಘವೇಂದ್ರ ಸುಹಾಸ್ ಮಾತನಾಡಿ, ಪ್ರಧಾನಮಂತ್ರಿಯವರ ಕಾರ್ಯಕ್ರಮದ ವೇದಿಕೆ ಹಾಗೂ ಸಾರ್ವಜನಿಕರು ಸೇರುವ ಸ್ಥಳದಲ್ಲಿ ಪ್ರತ್ಯೇಕ ವಿದ್ಯುಚ್ಛಕ್ತಿ ವ್ಯವಸ್ಥೆ ಕಲ್ಪಿಸಬೇಕು ಎಂದರು.
ಜಿಲ್ಲಾಧಿಕಾರಿ ಡಾ. ವಿಶಾಲ್, ಈಗಾಗಲೇ ಪ್ರಧಾನಮಂತ್ರಿ ಹಾಗೂ ಉಪರಾಷ್ಟ್ರಪತಿ ಅವರ ಭೇಟಿಯ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಗಿದ್ದು ಭದ್ರತಾ ಸಂಸ್ಥೆಯ ಮಾರ್ಗಸೂಚಿಯ ಪ್ರಕಾರ ಎಲ್ಲ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.
ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶ್ ಕುಮಾರ್, ಜಿಪಂ ಸಿಇಓ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಎಚ್. ಸುಧೀರಕುಮಾರ್ ರೆಡ್ಡಿ ಸೇರಿದಂತೆ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ