ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಜಿಲ್ಲೆಯನ್ನು ತಂಬಾಕು ಮುಕ್ತ ಜಿಲ್ಲೆಯನ್ನಾಗಿಸಲು ವಿವಿಧ ಇಲಾಖೆ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಬೇಕು. ಪ್ರಾರಂಭಿಕವಾಗಿ ಜಿಲ್ಲೆಯ ಒಂದು ಗ್ರಾಮವನ್ನು ತಂಬಾಕು ಮುಕ್ತ ಗ್ರಾಮವನ್ನಾಗಿ ಪರಿವರ್ತಿಸಬೇಕೆಂದು ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ ಸೂಚಿಸಿದರು.
ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ ತ್ರೈಮಾಸಿಕ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಎಲ್ಲ ಶೈಕ್ಷಣಿಕ ಸಂಸ್ಥೆಗಳನ್ನು ತಂಬಾಕು ಮುಕ್ತಗೊಳಿಸಲು ವಿವಿಧ ಇಲಾಖೆಗಳು ಕಾರ್ಯನಿರ್ವಹಿಸಬೇಕಾಗುತ್ತದೆ. ಎಲ್ಲ ಪದವಿ ಪೂರ್ವ ಕಾಲೇಜುಗಳಲ್ಲಿ, ಪ್ರೌಢಶಾಲೆಗಳಲ್ಲಿ ಹಾಗೂ ಶಾಲಾ ಆಡಳಿತ ಮಂಡಳಿಯಲ್ಲಿ ತಂಬಾಕು ದುಷ್ಪರಿಣಾದ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಮತ್ತು ತಂಬಾಕು ಮಾರಾಟಗಾರರಿಗೆ ದಂಡ ವಿಧಿಸಬೇಕೆಂದು ತಿಳಿಸಿದರು.
ರಾಜ್ಯದಲ್ಲಿಯೇ ಅತಿ ದೊಡ್ಡ ಜಿಲ್ಲೆಯಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ತಂಬಾಕು ಸೇವನೆಯ ಪ್ರಕರಣಗಳು ಕಂಡುಬರುತ್ತಿವೆ. ಆದ್ದರಿಂದ ಇದಕ್ಕೆ ಸಂಬಂಧಿಸಿದ ಇಲಾಖೆಗಳು ಪ್ರಸಕ್ತ ಸಾಲಿನಲ್ಲಿ ಒಟ್ಟು ದಂಡ ವಿಧಿಸಿ ಸಂಗ್ರಹಿಸುವ ಗುರಿಯನ್ನು 1 ಕೋಟಿ ಇಟ್ಟುಕೊಂಡು ಕ್ರಿಯಾಯೋಜನೆಯನ್ನು ಸಿದ್ಧ ಪಡಿಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಮುಖಾಂತರ ಜಿಲ್ಲಾಧಿಕಾರಿಗಳ ಕಛೇರಿಗೆ ಸಲ್ಲಿಸಬೇಕೆಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ. ಬಾಳಕೃಷ್ಣ ತುಕ್ಕಾರ ಅವರು ಜಿಲ್ಲಾ ತಂಬಾಕು ನಿಷೇಧ ಕೋಶದ ಕಾರ್ಯ ಚಟುವಟಿಕೆಗಳು, ಕೋಟ್ಪಾ ಕಾಯ್ದೆ- 2003 ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗಬಹುದಾದ ತೊಂದರೆಗಳ ಕುರಿತು ವಿವರಿಸಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್ ವ್ಹಿ ಮುನ್ಯಾಳ ಉಪಸ್ಥತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ