ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಶೀಘ್ರ ಪೂರ್ಣ: ಸಿದ್ದರಾಮಯ್ಯ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಬೈಲಹೊಂಗಲ ತಾಲ್ಲೂಕಿನ ಸಂಗೊಳ್ಳಿಯಲ್ಲಿ ರಾಯಣ್ಣ ಸ್ಮಾರಕ ಸೈನಿಕ ಶಾಲೆ, ರಾಕ್ ಗಾರ್ಡನ್, ಕಲ್ಯಾಣಮಂಟಪ ಮತ್ತಿತರ ಕಾಮಗಾರಿಗಳು; ಖಾನಾಪುರ ತಾಲ್ಲೂಕಿನ ನಂದಗಡದಲ್ಲಿ ಸಂಗೊಳ್ಳಿ ರಾಯಣ್ಣ ಸ್ಮಾರಕ ಮ್ಯೂಸಿಯಂ (ವೀರಭೂಮಿ), ಯಾತ್ರಿನಿವಾಸ ನಿರ್ಮಾಣ ಮ
ತ್ತು ರಾಯಣ್ಣ ಸ್ನಾನ ಮಾಡುತ್ತಿದ್ದ ಕೆರೆಯ ಜೀರ್ಣೋದ್ಧಾರ ಸೇರಿದಂತೆ ಒಟ್ಟಾರೆ 267.67 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.
ಸಂಗೊಳ್ಳಿಯಲ್ಲಿ ರಾಯಣ್ಣ ಸ್ಮಾರಕ ಸೈನಿಕ ಶಾಲೆ ಸೇರಿದಂತೆ ಉಳಿದ ಎಲ್ಲ ಕಾಮಗಾರಿಗಳನ್ನು ಆರಂಭಿಸಲು ಸರ್ಕಾರವು ಪ್ರಾಧಿಕಾರಕ್ಕೆ ತಕ್ಷಣ ಹಣ ಬಿಡುಗಡೆಗೊಳಿಸುವ ಮೂಲಕ ಮುಂದಿನ ಒಂದೂವರೆ ವರ್ಷದಲ್ಲಿ ಕೆಲಸ ಪೂರ್ಣಗೊಳಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಬೈಲಹೊಂಗಲ ತಾಲ್ಲೂಕಿನ ಸಂಗೊಳ್ಳಿ ಸಮೀಪ ಜಿಲ್ಲಾಡಳಿತ ಹಾಗೂ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಿರ್ಮಿಸಲಾಗುತ್ತಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸ್ಮಾರಕ ಸೈನಿಕ ಶಾಲೆ ಹಾಗೂ ವಿವಿಧ ಕಾಮಗಾರಿಗಳಿಗೆ ಮಂಗಳವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಬೆಳಗಾವಿ ವಿಮಾನ ನಿಲ್ದಾಣಕ್ಕೆ ರಾಣಿ ಚನ್ನಮ್ಮ ಹೆಸರಿಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಕಳಿಸಲಾಗಿದೆ. ಅದೇ ರೀತಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರಿಡಲು ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಒತ್ತಾಯಿಸಲಾಗುವುದು ಎಂದು ತಿಳಿಸಿದರು.
ಸಂಗೊಳ್ಳಿ ರಾಯಣ್ಣ ಇತಿಹಾಸ ಕಂಡ ಅಪ್ರತಿಮ ದೇಶಭಕ್ತ ಹಾಗೂ ಸ್ವಾಮಿನಿಷ್ಠೆಗೆ ಹೆಸರುವಾಸಿ. ಸ್ವಾತಂತ್ರ್ಯ ಹೋರಾಟದ ಕಿಚ್ಚು ಹಚ್ಚಿದ ಈ ಪ್ರದೇಶ ಯುವ ಸಮುದಾಯಕ್ಕೆ ಸ್ಫೂರ್ತಿಯಾಗಬೇಕು ಎಂಬ ಕಾರಣಕ್ಕೆ ಸಂಗೊಳ್ಳಿಯಲ್ಲಿ ರಾಯಣ್ಣನ ಹೆಸರಿನಲ್ಲಿ ಸೈನಿಕ ಶಾಲೆ ಆರಂಭಿಸಬೇಕು ಎಂಬುದು ಅನೇಕ ಜನರ ಆಶಯವಾಗಿತ್ತು. ಆದ್ದರಿಂದ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನವನ್ನು ಪ್ರಾಧಿಕಾರವಾಗಿ ಪರಿವರ್ತಿಸಿ ಬಜೆಟ್ ನಲ್ಲಿ ಹಣ ಮೀಸಲು ಇಡಲಾಗಿತ್ತು. ಅದರನ್ವಯ ಇದೀಗ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ರಾಯಣ್ಣನ ಜತೆ ನಂದಗಡದಲ್ಲಿ ಏಳು ಜನರಿಗೆ ಗಲ್ಲುಶಿಕ್ಷೆ ವಿಧಿಸಲಾಗಿತ್ತು. ಅದರಲ್ಲಿ ಬೇಡರು, ಲಿಂಗಾಯತರು ಹಾಗೂ ಜೈನ ಸಮಾಜದವರೂ ಇದ್ದರು. ನಮ್ಮ ಜನರ ಪಿತೂರಿಯಿಂದಲೇ ಸಂಗೊಳ್ಳಿ ರಾಯಣ್ಣ ಬ್ರಿಟೀಷರ ಕೈವಶವಾಗಿ ನೇಣುಗಂಬಕ್ಕೆ ಏರಿದರು.
ನಾಡರಕ್ಷಣೆಗೆ ಬದುಕು ಸಮರ್ಪಿಸಿದ ರಾಯಣ್ಣನ ಬದುಕು ಇಂದಿನ ಪೀಳಿಗೆಗೆ ಮಾರ್ಗದರ್ಶಿಯಾಗಬೇಕು ಎಂಬ ಕಾರಣಕ್ಕೆ ಸಂಗೊಳ್ಳಿಯಲ್ಲಿ ದೇಶಪ್ರೇಮ ಬೆಳೆಸುವ ಸೈನಿಕ ಶಾಲೆ ಸ್ಥಾಪಿಸುವ ನಿರ್ಧಾರ ಕೈಗೊಳ್ಳಲಾಯಿತು ಎಂದು ಸಿದ್ದರಾಮಯ್ಯ ತಿಳಿಸಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ, ಸಂಗೊಳ್ಳಿ ರಾಯಣ್ಣ ಸ್ಮಾರಕ ಸೈನಿಕ ಶಾಲೆ ಮತ್ತು ನಂದಗಡದ ಅಭಿವೃದ್ಧಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಲ್ಪನೆಯಾಗಿದ್ದು, ಅವರ ಕನಸು ಸಾಕಾರಕ್ಕೆ ಸರ್ಕಾರದ ವತಿಯಿಂದ ಎಲ್ಲ ರೀತಿಯ ನೆರವು ನೀಡಲು ಸಿದ್ಧ ಎಂದು ಭರವಸೆ ನೀಡಿದರು.
ಸಂಗೊಳ್ಳಿ ಬಂಡಾಯ ಗ್ರಂಥ ಬಿಡುಗಡೆಗೊಳಿಸಿ ಮಾತನಾಡಿದ ಶಾಸಕ ಹೆಚ್.ವಿಶ್ವನಾಥ್ ಅವರು, ಸಂಗೊಳ್ಳಿ ರಾಯಣ್ಣನವರ ಹೆಸರು ಅಜರಾಮರವಾಗಿಸುವ ಕೆಲಸವನ್ನು ಮಾಜಿ ಮುಖ್ಯಮಂತ್ರಿಗಳು ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಮಹಾಂತೇಶ ಕೌಜಲಗಿ ಅವರು, ಸ್ವಾತಂತ್ರ್ಯದ ರಣಕಹಳೆ ಮೊಳಗಿಸಿದ ಚನ್ನಮ್ಮನ ಬಲಗೈಬಂಟ ರಾಯಣ್ಣನ ಹೆಸರಿನಲ್ಲಿ ಸಂಗೊಳ್ಳಿಯಲ್ಲಿ ಸೈನಿಕ ಶಾಲೆ ನಿರ್ಮಾಣಗೊಳ್ಳುತ್ತಿರುವುದು ಹೆಮ್ಮೆಯ ವಿಷಯವಾಗಿದೆ.
ಪ್ರಾಧಿಕಾರದ ವತಿಯಿಂದ ಕೈಗೊಂಡಿರುವ ಕಾಮಗಾರಿಗಳನ್ನು ಸಕಾಲಕ್ಕೆ ಮುಕ್ತಾಯಗೊಳಿಸಲಾಗುವುದು ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಎಚ್.ಎಂ.ರೇವಣ್ಣ ಅವರು, ದೇಶಪ್ರೇಮ ಹಾಗೂ ಶೌರ್ಯದ ಸಂಕೇತವಾಗಿರುವ ರಾಯಣ್ಣನ ಸ್ಮರಣಾರ್ಥ 267.67 ಕೋಟಿ ರೂಪಾಯಿ ವೆಚ್ಚದಲ್ಲಿ ಸೈನಿಕ ಶಾಲೆ, ಮ್ಯೂಸಿಯಂ ಹಾಗೂ ಯಾತ್ರಿ ನಿವಾಸ ಸೇರಿದಂತೆ ಒಟ್ಟು ಆರು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಸಂಗೊಳ್ಳಿಯಲ್ಲಿ ನೂರು ಎಕರೆ ಜಾಗೆಯಲ್ಲಿ ಸೈನಿಕ ಶಾಲೆ ಹಾಗೂ ಖಾನಾಪುರ ತಾಲ್ಲೂಕಿನಲ್ಲಿ ಸಂಗೊಳ್ಳಿ ರಾಯಣ್ಣನ ಜೀವನಚರಿತ್ರೆ ಅನಾವರಣಗೊಳಿಸುವ ವಿಶ್ವದರ್ಜೆಯ ಮ್ಯೂಸಿಯಂ(ವೀರಭೂಮಿ) ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣನವರ ಹೆಸರು ಇಡಬೇಕು ಹಾಗೂ ಪ್ರಾಧಿಕಾರದಿಂದ ಕೈಗೆತ್ತಿಕೊಳ್ಳುವ ಕಾಮಗಾರಿಗಳಿಗೆ ತಕ್ಷಣ ಅನುದಾನ ಬಿಡುಗಡೆಗೊಳಿಸಬೇಕು ಎಂದು ಎಚ್.ಎಂ.ರೇವಣ್ಣ ಒತ್ತಾಯಿಸಿದರು.
ಸಾನಿಧ್ಯ ವಹಿಸಿದ್ದ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಆಶೀರ್ವಚನ ನೀಡಿದರು. ಸಂಗೊಳ್ಳಿಯ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.
ಅರಣ್ಯ ಇಲಾಖೆಯ ಸಚಿವರಾದ ಆರ್.ಶಂಕರ್, ಶಾಸಕರಾದ ಸತೀಶ್ ಜಾರಕಿಹೊಳಿ, ಮಹಾಂತೇಶ ದೊಡ್ಡಗೌಡರ, ಡಾ.ಅಂಜಲಿ ನಿಂಬಾಳಕರ, ಎಚ್.ವಿಶ್ವನಾಥ್, ವಿಧಾನ ಪರಿಷತ್ ಸದಸ್ಯ ಎಚ್.ಎಂ.ರೇವಣ್ಣ, ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ, ಮಾಜಿ ಸಂಸದರಾದ ವಿರುಪಾಕ್ಷಪ್ಪ, ಮಾಜಿ ಶಾಸಕ ಬಸವರಾಜ ಶಿವಣ್ಣನವರ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕಾಂತರಾಜ್ ಮತ್ತಿತರರು ಉಪಸ್ಥಿತರಿದ್ದರು.
ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಹೊರಪೇಟೆ ಮಲ್ಲೇಶಪ್ಪ ಸ್ವಾಗತಿಸಿದರು. ಬೈಲಹೊಂಗಲ ಉಪ ವಿಭಾಗಾಧಿಕಾರಿ ವಂದಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ