Latest

ಹುಕ್ಕೇರಿ, ಸಂಕೇಶ್ವರಕ್ಕೆ ಒಳಚರಂಡಿ ಯೋಜನೆ -ಯು.ಟಿ.ಖಾದರ್

 : 

      ಪ್ರಗತಿವಾಹಿನಿ ಸುದ್ದಿ, ಸುವರ್ಣ ವಿಧಾನ ಸೌಧ, ಬೆಳಗಾವಿ
ರಾಜ್ಯದ ವಿವಿಧ ನಗರಗಳಲ್ಲಿ ಕೈಗೊಂಡಿರುವ ಒಳಚರಂಡಿ ಕಾಮಗಾರಿಗಳು ಪೂರ್ಣಗೊಳ್ಳಲು ಸ್ಥಳೀಯರ ಸಹಕಾರ ಅಗತ್ಯ ಎಂದು ನಗರಾಭಿವೃದ್ಧಿ ಹಾಗೂ ವಸತಿ ಸಚಿವ ಯು. ಟಿ. ಖಾದರ್ ಅವರು ತಿಳಿಸಿದರು.
ರಾಜ್ಯ ವಿಧಾನಸಭೆಯಲ್ಲಿ ಬುಧವಾರ ಪ್ರಶ್ನೋತ್ತರ ವೇಳೆಯಲ್ಲಿ ಚಿತ್ರದುರ್ಗ ಶಾಸಕ ತಿಪ್ಪಾರೆಡ್ಡಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ರಾಜ್ಯದ ವಿವಿಧ ನಗರ ಪ್ರದೇಶಗಳಲ್ಲಿ ಒಳಚರಂಡಿ ಯೋಜನೆಯಲ್ಲಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಆದರೆ, ಕೆಲವೆಡೆ ಭೂ-ಸ್ವಾಧೀನ ಸಂಬಂಧ ಕೆಲವರು ನ್ಯಾಯಾಲಯದ ಮೆಟ್ಟಿಲು ಏರಿರುವುದರಿಂದ ಕಾಮಗಾರಿಗಳು ವಿಳಂಬವಾಗುತ್ತಿದೆ. ಈ ನಿಟ್ಟಿನಲ್ಲಿ ಸ್ಥಳೀಯರ ಸಹಕಾರ ಅಗತ್ಯವಿದೆ ಎಂದರು.
ಚಿತ್ರದುರ್ಗ ನಗರದ ಒಳಚರಂಡಿ ಯೋಜನೆಯ ೭೮.೪೭ ಕೋಟಿ ರೂ. ಅಂದಾಜು ಪಟ್ಟಿಗೆ ಅನುಮೋದನೆ ನೀಡಿ ಈಗಾಗಲೇ ಶೇಕಡಾ ೯೦ ರಷ್ಟು ಕಾಮಗಾರಿಗಳು ಪೂರ್ಣಗೊಂಡಿವೆ. ಅಲ್ಲದೆ, ೧೧ ಕೆವಿ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿ ಮುಕ್ತಾಯ ಹಂತದಲ್ಲಿದೆ. ಜೂನ್ ೨೦೧೯ ರ ಅಂತ್ಯಕ್ಕೆ ಒಳಚರಂಡಿ ಗೃಹ ಸಂಪರ್ಕ ಪೂರ್ಣಗೊಳಿಸಿ ಸಾರ್ವಜನಿಕ ಉಪಯೋಗಕ್ಕೆ ಒದಗಿಸಲಾಗುವುದು ಎಂದು ಹೇಳಿದರು.
ಶಾಸಕ ಉಮೇಶ್ ಕತ್ತಿ ಅವರ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಸರ್ಕಾರ ಪ್ರಾಯೋಜಿತ ಸಣ್ಣ ಮತ್ತು ಮಧ್ಯಮ ಪಟ್ಟಣಗಳಿಗೆ ನಗರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿಯಲ್ಲಿ ಹುಕ್ಕೇರಿ ಮತ್ತು ಸಂಕೇಶ್ವರ ಪುರಸಭೆಗಳ ವ್ಯಾಪ್ತಿಯಲ್ಲಿ ಒಳಚರಂಡಿ ನಿರ್ಮಾಣ ಯೋಜನೆಗೆ ಅನುಮೋದನೆ ದೊರೆತಿಲ್ಲ. ಆದರೆ, ರಾಜ್ಯ ಸರ್ಕಾರ ೧೩.೭೦ ಕೋಟಿ ರೂ. ಮೊತ್ತದಲ್ಲಿ ಹುಕ್ಕೇರಿ ಪಟ್ಟಣ ಹಾಗೂ ೧೯.೮೧ ಕೋಟಿ ರೂ. ಮೊತ್ತದಲ್ಲಿ ಸಂಕೇಶ್ವರ ಪಟ್ಟಣಕ್ಕೆ ಒಳಚರಂಡಿ ಯೋಜನೆಗೆ ಅನುಮೋದನೆ ನೀಡಿದೆ. ಸ್ಥಳೀಯ ಸಂಸ್ಥೆಗಳು ಸಕಾಲದಲ್ಲಿ ಅಗತ್ಯವಿರುವ ಭೂಮಿ ಒದಗಿಸದ ಕಾರಣ ಯೋಜನೆಯ ಅನುಷ್ಠಾನ ವಿಳಂಬವಾಗಿದೆ. ಅಲ್ಲದೆ, ದರಗಳಲ್ಲಿ ವ್ಯತ್ಯಾಸಗಳಾಗಿವೆ. ಈ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ಮಾರ್ಪಡಿಸಿ ಹುಕ್ಕೇರಿಗೆ ೬೦ ಕೋಟಿ ರೂ. ಹಾಗೂ ಸಂಕೇಶ್ವರಕ್ಕೆ ೮೬.೨೫ ಕೋಟಿ ರೂ. ಮೊತ್ತದ ಯೋಜನೆಯನ್ನು ರೂಪಿಸಲಾಗಿದೆ ಎಂದು ಸಚಿವರು ವಿವರಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button